×
Ad

ಎದೆನೋವು: ಮುರುಘಾಶ್ರೀಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

Update: 2022-09-02 09:22 IST

ಚಿತ್ರದುರ್ಗ, ಸೆ.2: ಪೊಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಮರುಘಾ ಶರಣ ಎದೆನೋವಿನ ಕಾರಣ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಮರುಘಾ ಶರಣರನ್ನು ಪೊಲೀಸರು ಕಳೆದ ರಾತ್ರಿ ಬಂಧಿಸಿದ್ದರು. ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಬಗ್ಗೆ ಮೈಸೂರಿನ ನಝರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆ.27ರಂದು ಈ ಪ್ರಕರಣವನ್ನು ಮೈಸೂರಿನಿಂದ ಚಿತ್ರದುರ್ಗದ ಗ್ರಾಮೀಣ ಪೊಲೀಸ್‌ ಠಾಣೆಗೆ  ವರ್ಗಾಯಿಸಲಾಗಿತ್ತು. ಈ ನಡುವೆ ಪೊಕ್ಸೊ ಜೊತೆಗೆ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತೊಂದು ಕೇಸ್ ಕೂಡ ದಾಖಲಾಗಿತ್ತು. ಈ ಸಂಬಂಧ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರಾತ್ರಿಯೇ ಪ್ರಾಥಮಿಕ ವಿಚಾರಣೆ, ವೈದ್ಯಕೀಯ ತಪಾಸಣೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದ ಪೊಲೀಸ್‌ ಅಧಿಕಾರಿಗಳು ಮುಂಜಾವ 2:30ರ ಸುಮಾರಿಗೆ ನಗರದ ಹೊರವಲಯದ ಹಳೆ ಬೆಂಗಳೂರು ರಸ್ತೆಯಲ್ಲಿರುವ ಕಾರಾಗೃಹಕ್ಕೆ ಸೇರಿಸಿದರು.

ಇದಕ್ಕೂ ಮುನ್ನ, ಸ್ವಾಮೀಜಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮುಂದಾದ ಘಟನೆ ನಡೆದಿದೆ. ಇದಕ್ಕೆ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪ: ಮುರುಘಾ ಶ್ರೀ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News