ರಾಜ್ಯ ಸರ್ಕಾರಿ ನೌಕರರ ದಿನಾಚರಣೆ; ಸೆ.6ರಂದು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ

Update: 2022-09-03 07:39 GMT

ಬೆಂಗಳೂರು, ಸೆ. 3: ಇದೇ 6ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದ ಜೊತೆಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇದೇ ಸಂದರ್ಭದಲ್ಲಿ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಪ್ರಕಟಿಸಿದ್ದಾರೆ. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಅಲ್ಲದೆ, ಈಗಾಗಲೇ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News