ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 725 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎನ್ಐಎ
ಬೆಂಗಳೂರು, ಸೆ.3: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ವಿಶೇಷ ನ್ಯಾಯಾಲಯಕ್ಕೆ 725 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ.
ಪ್ರಮುಖವಾಗಿ 10 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇನ್ನೂ, ದೋಷಾರೋಪಣೆ ಪಟ್ಟಿಯಲ್ಲಿ ಆರೋಪಿಗಳಿಗೆ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಹತ್ಯೆ ಮಾಡುವುದೇ ಉದ್ದೇಶ ಆಗಿತ್ತು. ಸಂಚು ರೂಪಿಸಿ ಹರ್ಷನ ಹತ್ಯೆ ಮಾಡಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಹಳೆಯ ದ್ವೇಷ ಇಟ್ಟುಕೊಂಡು ಹತ್ಯೆ ಮಾಡಲು ಪ್ರಕರಣದ ಮೊದಲನೇ ಆರೋಪಿ ಆಯ್ಕೆ ಮಾಡಿದ್ದ. ಇದಲ್ಲದೆ ಹಿಂದುತ್ವ ಸಂಘಟನೆಯಲ್ಲಿ ಸಕ್ರಿಯವಾಗಿದ್ದು ತಮಗೆ ವಿರೋಧಿಯಾಗಿರುವ ಹರ್ಷ ಕೊಲೆ ಮಾಡುವ ಮೂಲಕ ಜಿಲ್ಲೆಯಲ್ಲಿ ಭಯ ಹುಟ್ಟಿಸುವುದು ಆರೋಪಿಗಳ ಉದ್ದೇಶ ಆಗಿತ್ತು ಎಂಬುದು ಚಾರ್ಜ್‍ಶೀಟ್ ನಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 20 ರಂದು ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಆನಂತರ, ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಈ ಮಧ್ಯೆಯೇ ಸರಕಾರ ಎನ್‍ಐಎಗೆ ಪ್ರಕರಣದ ತನಿಖೆಯ ಜವಾಬ್ದಾರಿ ನೀಡಿತ್ತು.