ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ರನ್ನು ಎನ್‌ಎಎಲ್‌ಎಸ್‌ಎಯ ನೂತನ ಅಧ್ಯಕ್ಷರನ್ನಾಗಿ ಆಯ್ಕೆ
Update: 2022-09-03 22:49 IST
ಹೊಸದಿಲ್ಲಿ, ಸೆ. ೩: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್‌ಎಎಲ್‌ಎಸ್‌ಎ) ದ ನೂತನ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶಿಸಿದ್ದಾರೆ ಎಂದು ಕಾನೂನು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಯು.ಯು. ಲಲಿತ್ ಅವರು ಭಾರತದ ೪೯ನೇ ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಹೊಂದಿದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ನ್ಯಾಯಮೂರ್ತಿ ಚಂದ್ರಚೂಡ ಅವರನ್ನು ನಾಮ ನಿರ್ದೇಶಿಸಲಾಗಿದೆ. ಸಮಾಜದ ದುರ್ಬಲ ವರ್ಗದವರಿಗೆ ಉಚಿತ ಕಾನೂನು ಸೇವೆಯನ್ನು ಒದಗಿಸಲು ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ-೧೯೮೭ರ ಅಡಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಆರಂಭಿಸಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಡಿ.ವೈ. ಚಂದ್ರಚೂಡ್ ಅವರು ಅಹಲಹಾಬಾದ್ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶರು ಹಾಗೂ ಬಾಂಬೆ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶರಾಗಿದ್ದರು.