ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್‍ಗೆ ಜಾಮೀನು
ಬೆಂಗಳೂರು, ಸೆ.4: ಲಂಚ ಸ್ವೀಕಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್‍ಗೆ ನಗರದ 23ನೆ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯಡಿ ಸ್ಥಾಪಿತಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಪೀಠ, ಈ ಆದೇಶ ನೀಡಿದೆ.
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ 60 ದಿನಗಳೊಳಗೆ ದೋಷಾರೋಪಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಯು ಕಾನೂನುಬದ್ಧವಾಗಿ ಪಡೆಯಬಹುದಾದ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಅನುಮತಿ ಇಲ್ಲದೆ ದೇಶ ಬಿಟ್ಟು ಹೊರ ಹೋಗುವಂತಿಲ್ಲ. ತನಿಖಾಧಿಕಾರಿಯ ಅನುಮತಿ ಪಡೆಯದೆ ರಾಜ್ಯ ತೊರೆಯುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಬಾಕಿ ಇದ್ದರೂ ಸಿಆರ್‍ಪಿಸಿ ನಿಯಮಗಳ ಪ್ರಕಾರ ಅರ್ಜಿದಾರರು ಡಿಫಾಲ್ಟ್ ಜಾಮೀನು ಕೋರಲು ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಡಿಫಾಲ್ಟ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.