ಬಿಎಸ್‌ವೈ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ: ಮರು ವಿಚಾರಣೆಗೆ ಹೈಕೋರ್ಟ್ ಆದೇಶ

Update: 2022-09-07 12:55 GMT

ಬೆಂಗಳೂರು, ಸೆ.7: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಕುರಿತಂತೆ ಮರು ವಿಚಾರಣೆಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಪ್ರಾಸಿಕ್ಯೂಸಿನ್ ಪೂರ್ವಾನುಮತಿ ಸಿಗದ ಹಿನ್ನೆಲೆಯಲ್ಲಿ ಈ ಹಿಂದೆ ಈ ಕೇಸ್‌ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್‌ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಆದೇಶಿಸಿದೆ. ಅಲ್ಲದೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. 

ಕೋಲ್ಕತ್ತಾ ಮೂಲದ ಶೆಲ್ ಕಂಪೆನಿಗಳಲ್ಲಿ ಯಡಿಯೂರಪ್ಪ ಕುಟುಂಬಸ್ಥರು ಹೂಡಿಕೆ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಚಂದ್ರಕಾಂತ್ ರಾಮಲಿಂಗಮ್ ಕಂಪೆನಿಯಿಂದ ಕೋಟ್ಯಂತರ ರೂ.ಲಂಚ ಪಡೆದಿದ್ದಾರೆ. ರಾಮಲಿಂಗಮ್ ಜತೆ ವಿಜಯೇಂದ್ರ, ಶಶಿಧರ ಮರಡಿ ಸಂಬಂಧ ಇದೆ. ಸರಕಾರದ ವಿವಿಧ ಕಾಮಗಾರಿಗಳಿಗೆ ದೇಣಿಗೆ ಬಿಡುಗಡೆ ಮಾಡಲು ಬಿಎಸ್‌ವೈ ಆಪ್ತರು ಒತ್ತಡ ಹಾಕಿದ್ದಾರೆ. ಸರಕಾರ ವಿವಿಧ ಇಲಾಖೆ ಯೋಜನೆಗಳಲ್ಲಿ ಒತ್ತಡ ಹಾಕಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. 

ಆದರೆ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಅಬ್ರಹಾಂ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮೊರೆ ಹೋಗಿದ್ದರು. ರಾಜ್ಯಪಾಲರ ಅನುಮೋದನೆ ಇಲ್ಲದ ಕಾರಣ ದೂರನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಿದ್ದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತ್ತು. 

ಟಿ.ಜೆ. ಅಬ್ರಹಾಂ ಅವರು ಇತ್ತೀಚೆಗೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಇಲ್ಲವೇ ಎಸ್‌ಐಟಿಗೆ ವಹಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು. ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈಗ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಇದೇ ವೇಳೆ ಅರ್ಜಿಯನ್ನು ಮಾರ್ಪಡಿಸಿ, ಸಂಬಂಧ ಪಟ್ಟ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಸಿನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಕೋರ್ಟ್ ಮೊರೆ ಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News