ಸಕಲ ಸರಕಾರಿ ಗೌರವಗಳೊಂದಿಗೆ ಉಮೇಶ್ ಕತ್ತಿ ಅಂತ್ಯಕ್ರಿಯೆ

Update: 2022-09-07 15:27 GMT

ಬೆಳಗಾವಿ, ಸೆ.7: ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ(61) ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳಂತೆ ಹುಕ್ಕೇರಿ ತಾಲೂಕಿನ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಬುಧವಾರ ರಾತ್ರಿ ನೆರವೇರಿಸಲಾಯಿತು.

ಕುಟುಂಬ ಸದಸ್ಯರು, ರಾಜಕೀಯ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬುಧವಾರ ಹುಕ್ಕೇರಿ ಪಟ್ಟಣದಲ್ಲಿ ನೀರವ ಮೌನ ಆವರಿಸಿತ್ತು. ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಅಲ್ಲದೆ, ಶಾಲಾ, ಕಾಲೇಜುಗಳು ಹಾಗೂ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿತ್ತು.

ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದ ಉಮೇಶ್ ಕತ್ತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.

[ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಅವರ ಪತ್ನಿ ಶೀಲಾ ಅವರಿಗೆ ಹಸ್ತಾಂತರ ಮಾಡುತ್ತಿರುವುದು]

------------------------------------------------------

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರ ವಿಮಾನ ನಿಲ್ದಾಣಕ್ಕೆ ತರಲಾಯಿತು. ಕೆಲಹೊತ್ತು ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಮಠಾಧೀಶರಿಂದ ಮಂತ್ರಪಠಣ ನೆರವೇರಿಸಲಾಯಿತು.

ಆನಂತರ ಮರಾಠ ರೆಜಿಮೆಂಟ್‍ನ ಸೇನಾ ವಾಹನದಲ್ಲಿ ಅವರ ಪಾರ್ಥಿವ ಶರೀರವನ್ನು ವಿಶ್ವರಾಜ್ ಸಕ್ಕರೆ ಕಾರ್ಖಾನೆವರೆಗೆ ಮೆರವಣಿಗೆ ಮೂಲಕ ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಬಳಿಕ, ಅಲ್ಲಿಂದ ಬೆಲ್ಲದ ಬಾಗೇವಾಡಿವರೆಗೂ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ತರಲಾಯಿತು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂತಿಮ ಯಾತ್ರೆಯ ಉದ್ದಕ್ಕೂ ಜನಸಾಗರವೇ ಸೇರಿತ್ತು. ಈ ವೇಳೆ ‘ಅಮರ್ ರಹೇ, ಅಮರ್ ರಹೇ, ಉಮೇಶ್ ಅಣ್ಣ ಅಮರ್ ರಹೇ’ ಎಂಬ ಘೋಷಣೆ ಮೊಳಗುತ್ತಿತ್ತು. ಬೆಲ್ಲದ ಬಾಗೇವಾಡಿಯಲ್ಲಿಯೂ ಸಾವಿರಾರು ಜನರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಯಾವುದೆ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಬಸವಜಯಮೃತ್ಯುಂಜಯ ಸ್ವಾಮಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಚಿವ ಸಂಪುಟದ ಸದಸ್ಯರು, ಮಾಜಿ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು

ಉಮೇಶ್ ಕತ್ತಿ ಅಗಲಿಕೆಯಿಂದ ಕುಗ್ಗಿ ಹೋಗಿರುವ ಅವರ ಸಹೋದರ ರಮೇಶ್ ಕತ್ತಿ, ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರು. ಈ ಸಂದರ್ಭದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೆ ವೈದ್ಯರು ಅವರ ಆರೋಗ್ಯ ತಪಾಸಣೆ ಮಾಡಿ, ಇಸಿಜಿ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

[ಗಣ್ಯರು ಪಾಲ್ಗೊಂಡಿರುವುದು]
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News