ದ.ಕ.ಜಿಲ್ಲೆಯಲ್ಲಿ ಶುಕ್ರವಾರವೂ ‘ಆರೆಂಜ್ ಅಲರ್ಟ್’ : ಹವಾಮಾನ ಇಲಾಖೆ
Update: 2022-09-08 20:20 IST
ಮಂಗಳೂರು, ಸೆ.8: ದ.ಕ.ಜಿಲ್ಲೆಗೆ ಶುಕ್ರವಾರವೂ ‘ಆರೆಂಜ್’ ಅಲರ್ಟ್ ಘೋಷಿಸಲಾಗಿದೆ. ಆದರೆ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಸಮುದ್ರದಲ್ಲಿ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಗುರುವಾರ ಹಗಲಿಡೀ ಮೋಡಕವಿದ ವಾತಾವರಣವಿತ್ತು. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿಯಿಂದಲೇ ಆರಂಭವಾದ ಮಳೆ ಗುರುವಾರ ಮುಂಜಾನೆಯವರೆಗೆ ನಿರಂತರವಾಗಿ ಸುರಿದಿದೆ.
ಗುರುವಾರ ಧರ್ಮಸ್ಥಳದಲ್ಲಿ 8 ಸೆಂ.ಮೀ., ಮಾಣಿ, ಬೆಳ್ತಂಗಡಿ, ಸುಬ್ರಹ್ಮಣ್ಯ 7, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ 6, ಮಂಗಳೂರು ನಗರ ಪುತ್ತೂರಿನಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.