ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ, ಸೆ.10: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕ್ರೀಡಾಪಟು ಶೈಕ್ಷಣಿಕವಾಗಿ ಕಡಿಮೆ ಅಂಕ ಪಡೆದರು, ಕ್ರೀಡೆಯಲ್ಲಿ ಮಾಡಿದ ಸಾಧನೆಯ ಆಧಾರದಲ್ಲಿ ಸರಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ. ಆದುದರಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಕಾಮನ್‌ವೆಲ್ತ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತ ಅತ್ಯುತ್ತಮ ಸಾಧನೆಗಳನ್ನು ಮಾಡಿದೆ. ಅದೇ ರೀತಿ ಭಾರತ ಒಲಪಿಂಕ್ಸ್ ನಲ್ಲೂ ಹೆಚ್ಚಿನ ಸಾಧನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ನಮ್ಮ ಕ್ರೀಡಾಪಟುಗಳನ್ನು ಸಿದ್ಧಗೊಳಿಸಬೇಕು. ಕ್ರೀಡೆಯು ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳಷ್ಟು ಸಹಕಾರಿಯಾಗುತ್ತದೆ. ಕ್ರೀಡೆ ಇಂದು ನಮ್ಮ ಜೀವನದ ಒಂದು ಭಾಗವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಅಧ್ಯಕ್ಷತೆಯನ್ನು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ವಹಿಸಿದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ತಾಲೂಕು ಕ್ರೀಡಾಧಿಕಾರಿ ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ತಾಲೂಕು ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ ಸೂಡ ವಂದಿಸಿದರು.
ಈ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಸುಮಾರು 700 ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದರು. ಅಥ್ಲೆಟಿಕ್ಸ್, ವಾಲಿಬಾಲ್, ಥ್ರೋ ಬಾಲ್, ಬ್ಯಾಡ್ಮಿಂಟನ್, ಟೆನ್ನಿಸ್ ಸೇರಿದಂತೆ ಒಟ್ಟು 17 ವಿವಿಧ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಯಲ್ಲಿ ವಿಜೇತರಾದವರು ಮೈಸೂರು ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ.