ಕೊರಗರ ವೈದ್ಯಕೀಯ ವೆಚ್ಚ ಮರುಪಾವತಿಗೆ ಶಾಸಕ ರಘುಪತಿ ಭಟ್ ಮನವಿ
ಉಡುಪಿ, ಸೆ.10: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರಕಾರದ ವತಿಯಿಂದ ಮರುಪಾವತಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿರುವ ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಆರ್ಥಿಕವಾಗಿ ತೀರ ದುರ್ಬಲ ರಾಗಿರುವ ಈ ಸಮುದಾಯದವರು ತೀವ್ರ ತರಹದ ಕಾಯಿಲೆಗಳಿಗೆ ಉತ್ತಮ ವಾದ ಚಿಕಿತ್ಸೆ ಪಡೆಯಲು ಅಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ.
ಹೆಚ್ಚಾಗಿ ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯಗಳ ಮಂದಿ ರಕ್ತಹೀನತೆ, ಅಪೌಷ್ಟಿಕತೆ, ಟಿಬಿ, ಕ್ಯಾನ್ಸರ್, ಮಧುಮೇಹ ಮುಂತಾದ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಸೂಕ್ತವಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮರಣ ಹೊಂದುತ್ತಿರುವುದನ್ನು ಗಮನಿಸಲಾಗಿದೆ. ಅಲ್ಲದೆ ಈ ಸಮುದಾಯ ದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಸರಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತ ವಾಗದೆ ಇರುವುದರಿಂದ ವೈದ್ಯಕೀಯ ವೆಚ್ಚ ಮರುಪಾವತಿ ಅವಶ್ಯಕವಾಗಿರುತ್ತದೆ ಎಂದು ಶಾಸಕರು ಪ್ರತಿಪಾದಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಕೊರಗ ಸಮುದಾಯ ದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಈ ಹಿಂದಿನಂತೆಯೇ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವುದು ಹಾಗೂ ಈ ಸಮುದಾಯಗಳು ವಾಸವಾಗಿರುವ ಕಾಲೋನಿಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸುವಂತೆ ಭಟ್ ಮನವಿ ಯಲ್ಲಿ ಆಗ್ರಹಿಸಿದ್ದಾರೆ.