ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಕೆ; ಹವಾಮಾನ ಇಲಾಖೆ ಮುನ್ಸೂಚನೆ

Update: 2022-09-11 11:44 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ‘ರಾಜಧಾನಿ ಬೆಂಗಳೂರು, ಉತ್ತರ ಒಳನಾಡಿನ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರವಿವಾರವೂ ರಾಜ್ಯದ ವಿವಿಧೆಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಉತ್ತರ ಕನ್ನಡದ ಅಂಕೋಲಾ ಮತ್ತು ಬೆಳಗಾವಿಯ ಲೋಂಡದಲ್ಲಿ ತಲಾ 7 ಸೆಂ.ಮೀ ಮಳೆ ದಾಖಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ‘ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಕಳೆದ ಕೆಲ ದಿನಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಎರಡು-ಮೂರು ದಿನಗಳಿಂದ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿತ್ತು. ಆದರೆ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿಗಂಟೆಗೆ 40ರಿಂದ 55 ಕಿ.ಮೀ.ವೇಗದಲ್ಲಿರುವ ಸಾಧ್ಯತೆಗಳಿವೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News