ಕೊರಗರ ವೈದ್ಯಕೀಯ ವೆಚ್ಚ ಮರುಪಾವತಿಗೆ ಕರಾವಳಿ ಶಾಸಕರ ನಿಯೋಗದಿಂದ ಸಿಎಂಗೆ ಮನವಿ

Update: 2022-09-14 06:35 GMT

ಉಡುಪಿ, ಸೆ.14: ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕೊರಗ ಸಮುದಾಯದವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆ ಸರಕಾರವೇ ಮರುಪಾವತಿಬೇಕು ಎಂದು ಆಗ್ರಹಿಸಿ ಕರಾವಳಿಯ ಮೂರು ಜಿಲ್ಲೆಗಳ ಶಾಸಕರ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ತೀರ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರಕಾರ ಆದೇಶಿಸಿದೆ. ಹೆಚ್ಚಾಗಿ ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯಗಳ ಮಂದಿ ರಕ್ತ ಹೀನತೆ, ಅಪೌಷ್ಟಿಕತೆ, ಟಿಬಿ, ಕ್ಯಾನ್ಸರ್, ಮಧುಮೇಹ ಮುಂತಾದ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಪರಿಣಾಮಕಾರಿಯಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮರಣ ಹೊಂದುತ್ತಾರೆ. ಅಲ್ಲದೆ ಈ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಸರಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತವಾಗದೆ ಇರುವುದರಿಂದ ವೈದ್ಯಕೀಯ ವೆಚ್ಚ ಮರುಪಾವತಿ ಅವಶ್ಯಕವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪರಿಶಿಷ್ಟ ಪಂಗಡ, ನೈಜ ದುರ್ಬಲ ಬುಡಕಟ್ಟು ಸಮುದಾಯ, ಕೊರಗ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಈ ಹಿಂದಿನಂತೆಯೇ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವುದು ಹಾಗೂ ಈ ಸಮುದಾಯಗಳು ವಾಸವಾಗಿರುವ ಕಾಲನಿಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

 ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈದ್ಯಕೀಯ ವೆಚ್ಚ ಮರುಪಾವತಿ ಮುಂದುವರಿಸಿ ತಕ್ಷಣದಲ್ಲಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮವಣ್ಣನ್‌ಗೆ ದೂರವಾಣಿ ಕರೆ ಮೂಲಕ ಸೂಚಿಸಿದರು.

 ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಎಂ.ಸುಕುಮಾರ್ ಶೆಟ್ಟಿ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಭಟ್ಕಳ ಶಾಸಕ ಸುನೀಲ್ ನಾಯ್ಕ್, ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕ ರೂಪಾಲಿ ನಾಯ್ಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News