BBMP ವಾರ್ಡ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2022-09-16 14:59 GMT

ಬೆಂಗಳೂರು, ಸೆ.16: ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಪುನರ್ ವಿಂಗಡಿಸಿ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿ ಆದೇಶಿಸಿದೆ.

ಈ ಕುರಿತು ಶಾಸಕರಾದ ಜಮೀರ್ ಅಹ್ಮದ್‌ಖಾನ್, ಸೌಮ್ಯರೆಡ್ಡಿ, ಎಂ.ಸತೀಶ್‌ರೆಡ್ಡಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. 

ಕಳೆದ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಮನವಿಯ ಹಿನ್ನೆಲೆಯಲ್ಲಿ ಕೆಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿತ್ತು. ಈ ವಾದದಿಂದ ಸಂತೃಪ್ತಗೊಳ್ಳದ ನ್ಯಾಯಪೀಠವು ವಾರ್ಡ್ ಪುನರ್ ವಿಂಗಡಣೆಯಲ್ಲಿನ ವ್ಯತ್ಯಾಸ ಮತ್ತು ಲೋಪಗಳನ್ನು ನಂತರ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಸರಕಾರಗಳು ಸರಿಪಡಿಸಲಿವೆ ಎಂದು ತಿಳಿಸಿ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು. 

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ಪ್ರತಿ ವಾರ್ಡ್ ನಲ್ಲಿ ಸಮಾನ ಸಂಖ್ಯೆಯ ಮತದಾರರು ಇರಬೇಕು. ಆದರೆ, ಸರಕಾರ ವಿವಿಧ ಅನುಪಾತದಲ್ಲಿ ಜನಸಂಖ್ಯೆ ಪರಿಗಣಿಸಿರುವ ಪರಿಣಾಮ ಪ್ರತಿಯೊಂದು ವಾರ್ಡ್ ನಲ್ಲಿ ಜನಸಂಖ್ಯೆ ಪ್ರಮಾಣದಲ್ಲಿ ವ್ಯತ್ಯಾಸವಿದೆ. ಆಡಳಿತ ಪಕ್ಷದ ಶಾಸಕರಿರುವ ವಿಧಾನಸಭಾ ಕ್ಷೇತ್ರದಲ್ಲಿ ತಮಗೆ ಅನುಕೂಲವಾಗುವಂತೆ ವಾರ್ಡ್ಗಳ ಪುನರ್ ರಚಿಸಲಾಗಿದೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಹೆಚ್ಚಿನ ಜನಸಂಖ್ಯೆ ಪರಿಗಣಿಸಲಾಗಿದೆ. ವಾರ್ಡ್ಗಳ ಸಂಖ್ಯೆಯನ್ನೂ ಕಡಿತಗೊಳಿಸಲಾಗಿದೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತ್ತೊಂದು ಕಡೆ ಆಡಳಿತ ಪಕ್ಷದ ಶಾಸಕ ಎಂ.ಸತೀಶ್‌ರೆಡ್ಡಿ ಅವರು ತಮ್ಮ ಕ್ಷೇತ್ರವಾದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕೆಲವು ವಾರ್ಡ್ಗಳನ್ನು ವಿಭಜಿಸಿ, ಪಕ್ಕದ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳ ಜತೆ ಸೇರ್ಪಡೆಗೊಳಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 

2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್ ಗೆ  ಜನಸಂಖ್ಯೆ ನಿಗದಿಪಡಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಭೌಗೋಳಿಕ ವಿಸ್ತೀರ್ಣ, ಕ್ಷೇತ್ರದ ಜನಸಂಖ್ಯೆ ಬೆಳವಣಿಗೆ ಆಧರಿಸಿ ವಾರ್ಡ್ ರಚಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೆ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ. ಅದರಂತೆ, 34 ಸಾವಿರದಿಂದ 39 ಸಾವಿರ ಜನಸಂಖ್ಯೆಯ ಆಧಾರದಲ್ಲಿ ವಾರ್ಡ್ಗಳನ್ನು ವಿಂಗಡಣೆ ಮಾಡಲಾಗಿದ್ದು, ಅರ್ಜಿಗಳನ್ನು ವಜಾಗೊಳಿಸಬೇಕೆಂದು ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು ವಾದ ಮಂಡಿಸಿದ್ದರು. 

ವಾರ್ಡ್ಗಳಲ್ಲಿ ಜನಸಂಖ್ಯೆಯ ವ್ಯತ್ಯಾಸಗಳಿರಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಇದನ್ನು ಕೋರ್ಟ್ಗೆ ಸಲ್ಲಿಸಲಾಗಿದೆ. ಹೀಗಾಗಿ, ಅರ್ಜಿದಾರರ ವಾದ ಪರಿಗಣಿಸದೆ, ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News