ಪ್ರಧಾನಿ ಮೋದಿಗೆ ಇಂದು 72 ವರ್ಷ: ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು, ರಾಹುಲ್ ಗಾಂಧಿ, ಕೇಜ್ರಿವಾಲ್

Update: 2022-09-17 06:17 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ 72ನೇ ವಸಂತಕ್ಕೆ ಕಾಲಿಟ್ಟಿದ್ದು,(Prime Minister Narendra Modi turned 72 on Saturday) ಬೆಳಗ್ಗೆಯಿಂದಲೇ ಎಲ್ಲಾ ರಾಜಕೀಯ ಮುಖಂಡರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತೆಲಂಗಾಣದ ಸಿಎಂ ಕೆ.ಚಂದ್ರಶೇಖರ್ ರಾವ್, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸಹಿತ ಹಲವರು  ಪಿಎಂ ಮೋದಿ ಅವರ ಜನ್ಮದಿನದಂದು ಶುಭ ಹಾರೈಸಿದರು ಹಾಗೂ  ಅವರ ಉತ್ತಮ ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.

"ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಸರಿಸಾಟಿಯಿಲ್ಲದ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ನಡೆಸುತ್ತಿರುವ ರಾಷ್ಟ್ರ ನಿರ್ಮಾಣ ಅಭಿಯಾನವು ನಿಮ್ಮ ನೇತೃತ್ವದಲ್ಲಿ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಬಯಸುತ್ತೇನೆ’’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು'' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ

"ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟಿಸಿದ್ದಾರೆ.

"ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಆರೋಗ್ಯವಂತ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ" ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News