ಭ್ರಷ್ಟಾಚಾರ ಆರೋಪ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಿಎಸ್ ವೈ

Update: 2022-09-18 14:56 GMT

ಬೆಂಗಳೂರು, ಸೆ.18: ಲಂಚ ಸ್ವೀಕಾರ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಮತ್ತು ನ್ಯಾ.ಹಿಮಾ ಕೊಹ್ಲಿ ಅವರ ಪೀಠ, ಸೆ.19ರಂದು ಅರ್ಜಿ ವಿಚಾರಣೆ ನಡೆಸಲಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಬಿಎಸ್‍ವೈ, ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್ ಶ್ರೀ, ರಾಮಲಿಂಗಂ ಕನ್‍ಸ್ಟ್ರಕ್ಷನ್ ಕಂಪೆನಿಯ ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಈಗ ಯಡಿಯೂರಪ್ಪ ಸುಪ್ರೀಂಕೋರ್ಟ್ ನಲ್ಲಿ ಕಾನೂನು ಸಮರ ಮುಂದುವರಿಸಿದ್ದಾರೆ. 

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ.ಎಸ್ ಯಡಿಯೂರಪ್ಪ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News