11,133 ಪೌರ ಕಾರ್ಮಿಕರ ಸೇವೆ ಕಾಯಂಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

Update: 2022-09-19 17:03 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (File Photo)

ಬೆಂಗಳೂರು, ಸೆ.19: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಪದ್ಧತಿಯಡಿ ವೇತನ ಪಡೆಯುತ್ತಿರುವ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸೋಮವಾರ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ. 

ಇದರಿಂದ 302 ನಗರ ಸ್ಥಳೀಯ ಸಂಸ್ಥೆಗಳಾದ ನಗರ ಸಭೆ, ಪುರ ಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ 5,533, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ 3,673 ಹಾಗೂ ರಾಜ್ಯದ ಇತರ 10 ಮಹಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ 1,927 ಪೌರ ಕಾರ್ಮಿಕರ ಸೇವೆ ಕಾಯಂ ಆಗಲಿದೆ.

ವಿಶೇಷ ನೇಮಕಾತಿ ನಿಯಮಗಳಲ್ಲಿನ ಷರತ್ತುಗಳು ಹಾಗೂ ಆರ್ಥಿಕ ಇಲಾಖೆಯ ಷರತ್ತುಗಳ ಅನ್ವಯ ಪೌರ ಕಾರ್ಮಿಕರ ಸೇವೆ ಕಾಯಂ ಆಗಲಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ನಿಯಮಗಳನ್ನು ಗೆಜೆಟ್‍ನಲ್ಲಿ ಪ್ರಕಟಿಸುವಂತೆ ಸಚಿವ ಸಂಪುಟ ಸೂಚಿಸಿದೆ.

11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಕೃತಜ್ಞತೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News