ಈ ವರ್ಷ 5 ಸಾವಿರ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆ ಭರ್ತಿ: ಸಚಿವ ಆರಗ ಜ್ಞಾನೇಂದ್ರ

Update: 2022-09-20 11:45 GMT

ಬೆಂಗಳೂರು, ಸೆ. 20: ‘ರಾಜ್ಯ ಪೊಲೀಸ್ ಇಲಾಖೆಯಲ್ಲಿ ಇಪ್ಪತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5ಸಾವಿರ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಪ್ರೀತಂ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ ಸೌಹಾರ್ದ ಕಾಪಾಡುವ ಹೊಣೆ ಹೊತ್ತಿರುವ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ಮೇಲೆ ಕ್ರಮ ವಹಿಸಲಾಗಿದೆ. 3 ವರ್ಷಗಳ ಹಿಂದೆ ಇಲಾಖೆಯಲ್ಲಿ ಒಟ್ಟು 22 ಸಾವಿರ ಹುದ್ದೆಗಳು ಖಾಲಿಯಿದ್ದು, ನೇಮಕದ ನಂತರ ಖಾಲಿ ಹುದ್ದೆಗಳ ಸಂಖ್ಯೆ 9 ಸಾವಿರಕ್ಕೆ ಇಳಿದಿದೆ' ಎಂದರು.

‘ಈ ವರ್ಷ, ಸುಮಾರು 3,500 ಸಶಸ್ತ್ರ ಪೊಲೀಸರ, ಹೊಸ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ 1,500 ನಾಗರಿಕ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡುವುದರ ಜತೆಗೆ, ಠಾಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾನೂನು ಸುವ್ಯವಸ್ಥೆಯಷ್ಟೇ ನಮ್ಮ ಹೊಣೆ: ‘ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವುದು ಇಲಾಖೆ ಜವಾಬ್ದಾರಿಯಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಕಷ್ಟೇ ಪೊಲೀಸ್ ಇಲಾಖೆ ಆದ್ಯತೆ ನೀಡಲಿದೆ. ವಯೋಮಿತಿ ವಿನಾಯಿತಿ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ' ಎಂದು ಪ್ರೀತಂಗೌಡ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಸ್ತಾಪಕ್ಕೆ ಆರಗ ಜ್ಞಾನೇಂದ್ರ ಇದೇ ವೇಳೆ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News