ಪೌರ ಕಾರ್ಮಿಕರ ಸೇವೆ ಖಾಯಂಗೆ ಶೀಘ್ರ ಆದೇಶ: ಸಚಿವ ಭೈರತಿ ಬಸವರಾಜು

Update: 2022-09-20 12:19 GMT
ಸಚಿವ ಭೈರತಿ ಬಸವರಾಜು

ಬೆಂಗಳೂರು, ಸೆ.20: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 11,133 ಪೌರ ಕಾರ್ಮಿಕರನ್ನು ಖಾಯಂ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ಈ ಸಂಬಂಧ ಕೆಲವೇ ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಬಿಎಂಪಿ ವ್ಯಾಪ್ತಿಯಲ್ಲಿ 3,673, ಉಳಿದ ಮಹಾನಗರ ಪಾಲಿಕೆಯಲ್ಲಿ 1,927 ಹಾಗೂ ಇನ್ನುಳಿದ 5 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಖಾಯಂ ಮಾಡಲಾಗಿದೆ ಎಂದು ತಿಳಿಸಿದರು.

ಖಾಯಂಗೊಂಡಿರುವ ಪೌರ ಕಾರ್ಮಿಕರಿಗೆ 17 ಸಾವಿರದಿಂದ 28,900 ರೂ.ಗಳವರೆಗೆ ವೇತನ ಶ್ರೇಣಿಯಲ್ಲಿ ವೇತನ ನೀಡಲೂ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಖಾಯಮಾತಿಯಿಂದ ಈ ಸಮುದಾಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.

'ಸಿಎಂ ಜತೆಗೆ ಚರ್ಚಿಸಿ ನಂತರ ಚಾಲಕ, ವಾಟರ್ ಮನ್‍ಗಳ ನೇಮಕ''

ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ಕ್ಲೀನರ್‍ಗಳು, ಲೋಡರ್ಸ್, ವಾಟರ್‍ಮನ್, ಹೆಲ್ಪರ್ಸ್ ಕೆಲಸ ಮಾಡುವ ಕಾರ್ಮಿಕರನ್ನು ಕೂಡಾ ಹಂತ ಹಂತವಾಗಿ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಸಿಬ್ಬಂದಿಯನ್ನು ಖಾಯಂ ಮಾಡುವ ಕುರಿತು ಸಿಎಂ ಅವರೊಂದಿಗೆ ಚರ್ಚಿಸಿದ ನಂತರ ನೇಮಕ ಮಾಡಿಕೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News