ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಾತ್ವಿಕ ಒಪ್ಪಿಗೆ: ಸಚಿವ ಡಾ.ಕೆ.ಸುಧಾಕರ್

Update: 2022-09-20 13:08 GMT

ಬೆಂಗಳೂರು, ಸೆ. 20: ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕೆಂಬ ವಿಚಾರಗಳ ಬಗ್ಗೆ ಸಿಎಂ ಚರ್ಚೆ ನಡೆಸಲಾಗುವುದು. ಈ ಪ್ರಸ್ತಾವ ಆರ್ಥಿಕ ಇಲಾಖೆಗೆ ಹೋಗಿದೆ. ಇನ್ನು ಸಿಎಂ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು' ಎಂದು ಹೇಳಿದರು.

‘ಕುಮಟ ಪ್ರದೇಶ ಉತ್ತರ ಕನ್ನಡ ಜಿಲ್ಲೆಯ ಮಧ್ಯಭಾಗದಲ್ಲಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸುವ ಬಗ್ಗೆಯೂ ಚರ್ಚೆಯಾಗಿದೆ. ಶಿರಸಿಯಲ್ಲಿ ಈಗಾಗಲೇ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಮುಂದಿನ ವರ್ಷಕ್ಕೆ ಆ ಕಾಮಗಾರಿಯೂ ಮುಗಿಯಲಿದೆ. ಅಲ್ಲಿ ಈ ವರ್ಷವೇ 150 ವಿದ್ಯಾರ್ಥಿಗಳಿಗೆ ಬೋಧಿಸಲು ಎನ್‍ಎಂಸಿಯಿಂದ ಪರವಾನಿಗೆ ದೊರೆತಿದೆ. ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡುವುದು, ಸಿಬ್ಬಂದಿ ಕೊರತೆ ನೀಗಿಸುವುದು, ಉಪಕರಣಗಳ ಪೂರೈಕೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ' ಎಂದು ಹೇಳಿದರು. ಸಚಿವ ಶಿವರಾಮ್ ಹೆಬ್ಬಾರ್, ಸ್ಥಳೀಯ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News