ಸೂಕ್ಷ್ಮ, ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ: ಸಚಿವ ಎಂಟಿಬಿ ನಾಗರಾಜ್
ಬೆಂಗಳೂರು, ಸೆ.20: ರಾಜ್ಯದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ 2020-25ರ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿಗಳನ್ನು ನೀಡಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ.
ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶೀಲ್ ಜಿ. ನಮೋಶಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಲಯದ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಬಂಡವಾಳ ಹೂಡಿಕೆ ಸಹಾಯಧನ, ಮುದ್ರಾಂಕ ಶುಲ್ಕ ವಿನಾಯಿತಿ ಸೇರಿದಂತೆ ಹತ್ತು ಹಲವು ವಿನಾಯಿತಿಗಳನ್ನು ನೀಡಲಾಗಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಗರಿಷ್ಠ 2 ಎಕರೆ ಕೈಗಾರಿಕಾ ನಿವೇಶನ ಮತ್ತು ಕೈಗಾರಿಕಾ ಶೆಡ್‍ಗಳನ್ನು ನೀಡಲಾಗುತ್ತಿದೆ. ಇದಲ್ಲದೆ ರಾಜ್ಯಾದ್ಯಂತ ಸಣ್ಣ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬರುವ ಉದ್ದಿಮೆದಾರರಿಗೆ ಹಲವು ಯೋಜನೆಗಳನ್ನು ಜಾರಿ ಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.