ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರಕಾರ ಬದ್ಧ: ಸಚಿವ ಡಾ.ಸುಧಾಕರ್

Update: 2022-09-22 15:31 GMT

ಬೆಂಗಳೂರು, ಸೆ. 22: ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿದ್ದು, ಜಮೀನಿನ ಲಭ್ಯತೆಯನ್ನು ಆಧರಿಸಿ ಯಾವ ಸ್ಥಳದಲ್ಲಿ ಆಸ್ಪತ್ರೆ ನಿರ್ಮಿಸಬೇಕೆಂದು ತೀರ್ಮಾನ ಮಾಡಲಾಗುವುದು' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ತಡೆಹಿಡಿಯಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲ ಶಾಸಕರೆಲ್ಲರೂ ಈ ಚರ್ಚೆಯಲ್ಲಿ ಭಾಗವಹಿಸಿದ್ದು, ಜಿಲ್ಲೆಯ ಪರ ಧ್ವನಿ ಎತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಉತ್ಕøಷ್ಟ ದರ್ಜೆಯ ಆರೋಗ್ಯ ಸೇವೆ ಸಿಗಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ' ಎಂದು ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆ ಜನಪ್ರತಿನಿಧಿಗಳ ಸಭೆ ನಡೆಸಿದ್ದು, ಸಿಎಂ ಆಸ್ಪತ್ರೆ ನಿರ್ಮಾಣಕ್ಕೆ ಭರವಸೆ ನೀಡಿದ್ದು, ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಅಧಿವೇಶನ ಕಲಾಪ ಮುಗಿದ ತಕ್ಷಣವೇ ಅದೇ ಜಿಲ್ಲೆಯನ್ನು ಪ್ರತಿನಿಧಿಸುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಸಭೆ ನಡೆಸಿ ಆದಷ್ಟು ಬೇಗ ಆಸ್ಪತ್ರೆ ವಿಚಾರ ಇತ್ಯರ್ಥಗೊಳಿಸುತ್ತೇವೆ' ಎಂದು ಸುಧಾಕರ್ ಭರವಸೆ ನೀಡಿದರು.

ಧರಣಿಗೆ ಯತ್ನ: ತಮಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ್ ಹಾಗೂ ಸುನೀಲ್ ನಾಯ್ಕ್, ‘ಜಿಲ್ಲೆಯ ಆಸ್ಪತ್ರೆಗೆ ತಕ್ಷಣವೇ 300 ಕೋಟಿ ರೂ.ಅನುದಾನ ಘೋಷಣೆ ಮಾಡಲೇಬೇಕು' ಎಂದು ಆಗ್ರಹಿಸಿ ಧರಣಿ ನಡೆಸಲು ಯತ್ನಿಸಿದ ಪ್ರಸಂಗವೂ ನಡೆಯಿತು. ಕೂಡಲೇ ಮಧ್ಯ ಪ್ರವೇಶಿಸಿದ ಕಾನೂನು ಸಚಿವ ಮಾಧುಸ್ವಾಮಿ, ‘ಒಂದು ಪ್ರಶ್ನೆಗೆ ಸುದೀರ್ಘ ಅವಧಿ ಚರ್ಚೆ ನಡೆಸಿದರೆ ಹೇಗೇ?’ ಎಂದು ಆಕ್ಷೇಪಿಸಿದರು.

ಸ್ಪೀಕರ್ ಕಾಗೇರಿ, ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಹಾಗೂ ಸಚಿವ ಶಿವರಾಮ್ ಹೆಬ್ಬಾರ್ ಅವರು, ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಆಗಲೇಬೇಕು. ಸ್ಥಳ ಎಲ್ಲಿ ಮಾಡಬೇಕೆಂಬ ಬಗ್ಗೆ ಕೂತು ಮಾತುಕತೆ ಮೂಲಕ ಇತ್ಯರ್ಥಪಡಿಸಬೇಕು. ಜಿಲ್ಲೆಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸರಕಾರ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News