ಕುಡುಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮನವಿ

Update: 2022-09-22 15:32 GMT

ಉಡುಪಿ, ಸೆ.22: ಕರಾವಳಿ ಭಾಗದಲ್ಲಿ ಹೆಚ್ಚಾಗಿ ವಾಸವಾಗಿರುವ ಕುಡುಬಿ ಜನಾಂಗ ವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸದೃಢಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ಶಿಫಾರಸ್ಸಿನೊಂದಿಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಕುಡುಬಿ ಸಂಘದ ಪದಾಧಿಕಾರಿಗಳು ಇಂದು ಬೆಂಗಳೂರಿನಲ್ಲಿ  ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕುಡುಬಿ ಜನಾಂಗದ ಆಚಾರ ವಿಚಾರ, ಭಾಷೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ, ಭೂಗೋಳಿಕ ಅಂಶಗಳ ಕುರಿತಂತೆ ಅಧ್ಯಯನ ನಡೆಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಕುಲಶಾಸ್ತ್ರೀಯ ಅಧ್ಯಯನವನ್ನು ನಡೆಸಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಸೂಕ್ತ ಶಿಫಾರಸ್ಸಿನೊಂದಿಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮನವಿಯಲ್ಲಿ ಸರಕಾರವನ್ನು ಒತ್ತಾಯಿಸಲಾಗಿದೆ.

ಈ ಪ್ರಸ್ತಾವನೆಯ ಕುರಿತು ಸಂಘದ ಪದಾಧಿಕಾರಿಗಳು  ಶಾಸಕ ಕೆ. ರಘುಪತಿ ಭಟ್ ಉಪಸ್ಥಿತಿಯಲ್ಲಿ  ಸಚಿವರಾದ ಶ್ರೀರಾಮುಲು ಅವರಿಗೆ ಎಲ್ಲಾ ವಿವರ ಗಳೊಂದಿಗೆ ಮನವರಿಕೆ ಮಾಡಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ತಕ್ಷಣದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಕುಡುಬಿ ಸಂಘದ ಅಧ್ಯಕ್ಷ ಎಂ.ಕೆ.ನಾಯಕ್, ಕೋಶಾಧಿಕಾರಿ ಗಣಪತಿ ನಾಯಕ್, ಕುಡುಬಿ ಸಂಘದ ಉಡುಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಾರ್ಥ ನಾಯಕ್, ಪದಾಧಿಕಾರಿಗಳಾದ ನರಸಿಂಹ ನಾಯಕ್, ಸುರೇಂದ್ರ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News