ನಾಡಗೀತೆ ಹಾಡಲು ಕಾಲಮಿತಿ ನಿಗದಿಪಡಿಸಿ ಆದೇಶ ಹೊರಡಿಸಿದ ಸರಕಾರ

Update: 2022-09-25 18:18 GMT

ಬೆಂಗಳೂರು, ಸೆ.25: ನಾಡಗೀತೆಯನ್ನು ಹಾಡಲು ಶ್ರೀಮೈಸೂರು ಅನಂತಸ್ವಾಮಿರವರ ದಾಟಿಯನ್ನು ಅಳವಡಿಸಿಕೊಂಡು ನಾಡಗೀತೆಯ ಪೂರ್ಣಪಾಠವನ್ನು ಬಳಸಬೇಕು ಹಾಗೂ ಯಾವುದೇ ಆಲಾಪವಿಲ್ಲದೆ, ಪುನರಾವರ್ತನ ಇಲ್ಲದೆ, ಎರಡು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಹಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮಹೇಶ್ ಆರ್., ಆದೇಶ ಹೊರಡಿಸಿದ್ದಾರೆ. 

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನಾನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು. 

2006ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್‍ಗಳಲ್ಲಿ ನಾಡಗೀತೆ ಹಾಡಬೇಕೆಂದು ಶಿಫಾರಸು ಮಾಡಿತ್ತು. ಆ ಶಿಫಾರಸ್ಸಿಗೆ ಸಿಎಂ ಸಮ್ಮತಿ ಸೂಚಿಸಿದ್ದರು. ಇದೀಗ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News