ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Update: 2022-09-27 14:55 GMT

ಬೆಂಗಳೂರು, ಸೆ.27: ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅಗತ್ಯ ತರಬೇತಿಯನ್ನು ನೀಡಲು  ಕ್ರಮವಹಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಶಿಕ್ಷಣ ಸಂಸ್ಥೆಗಳಿಗೆ ಕರೆ ನೀಡಿದರು.

ಮಂಗಳವಾರ ನಗರದ ರಿಚ್ಮಂಡ್ ವೃತ್ತದ ಬಳಿಯಿರುವ ಸೇಂಟ್ ಜೋಸೆಫ್ಸ್ ಕಾಲೇಜಿನ ಸಭಾಂಗಣದಲ್ಲಿ ‘ಸಂತ ಜೋಸೆಫ್ ವಿಶ್ವವಿದ್ಯಾಲಯ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಣವು ಮುಖ್ಯ ಪಾತ್ರ ವಹಿಸುವುದರಿಂದ ಸಮಾಜದಲ್ಲಿ ಉತ್ತಮ ರೀತಿಯ ಬದಲಾವಣೆ ತರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ದೇಶ ಅಭಿವೃದ್ಧಿ ಹೊಂದಬೇಕಾದರೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಬೇಕು. ಭಾರತದಲ್ಲಿರುವ ಶಿಕ್ಷಣ ಸಂಸ್ಥೆಗಳು ವಿಶ್ವದಲ್ಲೇ ಅತ್ಯಂತ ಉತ್ತಮ ಶಿಕ್ಷಣ ಸಂಸ್ಥೆಗಳಾಗಿ ಮಾರ್ಪಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

1882ರಲ್ಲಿ ಆರಂಭವಾದ ಸೇಂಟ್ ಜೋಸೆಫ್ಸ್ ಶಿಕ್ಷಣ ಸಂಸ್ಥೆಯು 140 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ಇವತ್ತು ಈ ಸಂಸ್ಥೆಗೆ ವಿಶ್ವವಿದ್ಯಾಲಯದ ಸ್ಥಾನಮಾನ ಸಿಗುತ್ತಿರುವುದು ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೇ, ದೇಶವೇ ಹೆಮ್ಮೆ ಪಡುವ ವಿಷಯ. ಇಲ್ಲಿ ಕಲಿತಿರುವ ಹಲವಾರು ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ಸೇನೆ ಹಾಗೂ ಸಾರ್ವಜನಿಕ ಜೀವನದಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 ದೇಶದ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇದು ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗಲಿದೆ ಎಂದು ರಾಷ್ಟ್ರಪತಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಜ್ಞಾನದ ಕೇಂದ್ರಗಳಾಗಿದ್ದು, ಮಾನವೀಯ ಹಾಗೂ ಸರಳ ವ್ಯಕ್ತಿತ್ವವನ್ನು ತನ್ನ ವಿದ್ಯಾರ್ಥಿಗಳಲ್ಲಿ ತುಂಬಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದು, ಶಿಕ್ಷಕರಾಗಿ, ಜನಪ್ರತಿನಿಧಿಯಾಗಿ, ರಾಜ್ಯಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ಸೇಂಟ್ ಜೋಸೆಫ್ ವಿದ್ಯಾ ಸಂಸ್ಥೆ ಬೆಂಗಳೂರಿನಲ್ಲಿ ಮಾತ್ರವಲ್ಲದೇ ಇಡೀ ಕರ್ನಾಟಕದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಶಿಕ್ಷಣ ಸಂಸ್ಥೆಯು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಸಂಸ್ಥೆ ಒತ್ತು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಹಾಗೂ ಉತ್ತಮಜೀವನಕ್ಕಾಗಿ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯಲು ಬಯಸುತ್ತಾರೆ ಎಂದು ಅವರು ಹೇಳಿದರು.

ಭವ್ಯ ಪರಂಪರೆಯನ್ನು ಹೊಂದಿರುವ ಸೇಂಟ್ ಜೋಸೆಫ್ಸ್ ಶಿಕ್ಷಣ ಸಂಸ್ಥೆ ವಿವಿಧ ಕಾಲಮಾನಗಳ ಶಿಕ್ಷಣ ಕ್ಷೇತ್ರದ ಬದಲಾವಣೆಗಳನ್ನು ಕಂಡಿದೆ. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಸೇಂಟ್ ಜೋಸೆಫ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಕೇಂದ್ರವಾಗಿದೆ. ಸಂಸ್ಥೆಯು ಈ ಜ್ಞಾನದ ಶಕ್ತಿಯನ್ನು ತನ್ನ ವಿದ್ಯಾರ್ಥಿಗಳಿಗೆ ಧಾರೆಯೆರೆಯುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ, ಬೆಂಗಳೂರಿನ ಆರ್ಚ್ ಬಿಷಪ್ ನ ಡಾ.ಪೀಟರ್ ಮಚಾದೊ, ಕುಲಪತಿ ಫಾ.ಡೈನಿಸಿಯಸ್ ವಾಝ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ನಾಗರಿಕ ಸತ್ಕಾರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗೌರವಾರ್ಥ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ನಾಗರಿಕ ಸತ್ಕಾರ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ರಾಷ್ಟ್ರಪತಿಯನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ  ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News