ಲಖಿಂಪುರ ಖೇರಿ: ಟ್ರಕ್ ಗೆ ಬಸ್ ಢಿಕ್ಕಿ, ಎಂಟು ಮಂದಿ ಮೃತ್ಯು, 25ಕ್ಕೂ ಅಧಿಕ ಜನರಿಗೆ ಗಾಯ
Update: 2022-09-28 10:52 IST
ಲಕ್ನೊ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಬೆಳಗ್ಗೆ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಇಸಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದ ಸಮಯದಲ್ಲಿ ಬಸ್ ದೌರೆಹ್ರಾದಿಂದ ಲಕ್ನೊಕ್ಕೆ ತೆರಳುತ್ತಿತ್ತು.
ಕೆಲವು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವು ಗಾಯಾಳುಗಳನ್ನು ಲಕ್ನೋಗೆ ಕಳುಹಿಸಲಾಗಿದೆ ಎಂದು ಲಖಿಂಪುರ ಖೇರಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಸಂಜಯ್ ಕುಮಾರ್ ತಿಳಿಸಿದ್ದಾರೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಆದಿತ್ಯನಾಥ್, ಸ್ಥಳಕ್ಕೆ ಧಾವಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.