ಬಾಗ್ಮನೆ ಟೆಕ್‍ಪಾರ್ಕ್ ಒತ್ತುವರಿ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹೈಕೋರ್ಟ್ ತಡೆ

Update: 2022-09-28 12:44 GMT

ಬೆಂಗಳೂರು, ಸೆ.28: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ನಗರದ ಬಾಗ್ಮನೆ ಟೆಕ್‍ಪಾರ್ಕ್ ಸಂಸ್ಥೆ ದೂರು ಆಧರಿಸಿ ಲೋಕಾಯುಕ್ತರು ನಡೆಸುತ್ತಿರುವ ಪರ್ಯಾಯ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೆ, ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಲೋಕಾಯುಕ್ತ ನಡೆಸುತ್ತಿರುವ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿ ವಿಚಾರಣೆ ಮುಂದೂಡಿತು. ಅಲ್ಲದೇ, ಕರ್ನಾಟಕ ಲೋಕಾಯುಕ್ತ, ಬಿಬಿಎಂಪಿ, ಪೌರಾಡಳಿತ ಇಲಾಖೆ, ಬಾಗ್ಮನೆ ಡೆವಲಪ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ಗೆ ನೋಟಿಸ್ ಜಾರಿ ಮಾಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಭ್ರಷ್ಟಾಚಾರ ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ. ಆದರೆ, ಬಾಗ್ಮನೆ ಒತ್ತುವರಿ ಸಂಬಂಧ ಮಧ್ಯಪ್ರವೇಶಿಸಿ ಒತ್ತುವರಿ ತೆರವು ಮಾಡದಂತೆ ಸೂಚಿಸಿದೆ. ತನ್ನ ಅಧಿಕಾರ ವ್ಯಾಪ್ತಿ ಮೀರಿ ಲೋಕಾಯುಕ್ತ ಆದೇಶ ನೀಡಿದೆ. ಈ ಪ್ರಕ್ರಿಯೆ ಹೈಕೋರ್ಟ್‍ನ ನ್ಯಾಯಾಂಗ ಅಧಿಕಾರವನ್ನು ಪ್ರಶ್ನೆ ಮಾಡುವಂತಾಗಿದೆ ಎಂದು ನ್ಯಾಯಪೀಠಕ್ಕೆ ಹೇಳಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ, ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News