‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಕಾರ್ಯಕ್ರಮಕ್ಕೆ ಚಾಲನೆ

Update: 2022-09-28 15:56 GMT

ಮಂಗಳೂರು, ಸೆ.28: ಪ್ರಧಾನಿ ನರೇಂದ್ರ ಮೋದಿಯ ಹುಟ್ಟುಹಬ್ಬ ಆಚರಣೆಯ ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬುಧವಾರ  ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಪರಿಕಲ್ಪನೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ  ಸರ್ವರಿಗೂ ಸಮಪಾಲು, ಸಮಬಾಳು ಎಂಬ ಧ್ಯೇಯದೊಂದಿಗೆ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತ ಮತ್ತೆ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿವೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆಯ ಬಳಿ ನೂತನವಾಗಿ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಉದ್ಘಾಟನಾ ಕಾರ್ಯಕ್ರಮ ಅ.3ರಂದು ಸಂಜೆ 6ಕ್ಕೆ ನಡೆಯಲಿದೆ ಎಂದರು.

ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಅಣ್ಯಯ್ಯ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಸಂಸ್ಥೆಯ ಆದರ್ಶ್ ಅವರನ್ನು ಗೌರವಿಸಲಾಯಿತು.

ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಉಪ ಮೇಯರ್ ಪೂರ್ಣಿಮಾ, ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಭಾಗವಹಿಸಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ರಾಮದಾಸ ಬಂಟ್ವಾಳ, ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಪ್ರಮುಖರಾದ ಬಾಲಕೃಷ್ಣ ಭಟ್, ನಿತಿನ್‌ಕುಮಾರ್, ರವಿಶಂಕರ ಮಿಜಾರ್, ಹರಿಕೃಷ್ಣ ಬಂಟ್ವಾಳ ಉಪಸ್ಥಿತರಿದ್ದರು.

ರೂಪಾ ಡಿ. ಬಂಗೇರ ವಂದೇ ಮಾತರಂ ಹಾಡಿದರು. ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News