ಅಕ್ರಮ ಮರಳು, ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

Update: 2022-09-29 13:28 GMT
ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್

ಉಡುಪಿ, ಸೆ.29: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಗಣಿಗಾರಿಕೆ ಬಗ್ಗೆ ದೂರು ಬಂದ ಕೂಡಲೇ ನಿರ್ದಾಕ್ಷಿಣ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಅಕ್ರಮ ಗಣಿಗಾರಿಕೆ ಮತ್ತು ಮರಳುಗಾರಿಕೆ ವಿರುದ್ಧ ದಂಡ ವಿಧಿಸಿರುವುದರಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಇವುಗಳ ವಿರುದ್ಧ ಕಂದಾಯ ಮತ್ತು ಪೊಲೀಸ್ ಇಲಾಖೆ, ಆರ್‌ಟಿಒ ಸಮನ್ವಯತೆ ಸಾಧಿಸಿ ಕಾರ್ಯಾಚರಣೆ ನಡೆಸಲಾಗುವುದು. ಅದಕ್ಕಾಗಿ ಆನ್ಲೈನ್ ಎಂಟ್ರಿ ಪೋರ್ಟಲ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳುಗಾರಿಕೆಗೆ ಕೆಲವು ನಿಯಮಗಳಿ ಅವಕಾಶ ಮಾಡಿಕೊಡಲಾಗಿದೆ. ಅಲ್ಲದೆ ಕೆಲವು ಸಾಂಪ್ರದಾಯಿಕವಾಗಿ ಮರಳು ತೆಗೆಯುವ ದಿಬ್ಬಗಳನ್ನು ಗುರುತಿಸಲಾಗಿದ್ದು, ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಜಿಲ್ಲೆಯ ಜನರಿಗೆ ಮರಳು ಲಭ್ಯವಾಗಲಿದೆ ಎಂದು ಅವರು ಹೇಳಿದರು.

ಹೆದ್ದಾರಿಗಳಲ್ಲಿ ಮೀನಿನ ನೀರು ಸೋರಿಕೆ ಮಾಡಿಕೊಂಡು ಸಾಗುವ ಮೀನಿನ ಲಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಪೊಲೀಸ್, ಆರ್‌ಟಿಒಗೆ ಸೂಚನೆ ನೀಡಲಾಗುವುದು. ವಾಹನಗಳ ಸುಗಮ ಸಂಚಾರಕ್ಕಾಗಿ ಈಗ ಇರುವ ಇಂದ್ರಾಳಿ ಸೇತುವೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅ.1ರಿಂದ ಆರಂಭಗೊಳ್ಳಲಿದ್ದು, ಇನ್ನೊಂದು ಬದಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಮಣಿಪಾಲ ಎಂಡ್‌ ಪಾಯಿಂಟ್ ಪ್ರದೇಶ ಸಾರ್ವಜನಿಕರಿಗೆ ನಿರ್ಬಂಧದ ಕುರಿತು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಉಡುಪಿ ನಗರದ ಒಳಚರಂಡಿ ವ್ಯವಸ್ಥೆ ಬಗ್ಗೆ ಸರ್ವೆ ನಡೆಸಿ ಹಂತಹಂತವಾಗಿ ಸಮಸ್ಯೆ ಪರಿಹರಿಸ ಲಾಗುವುದು. ಮಳೆ ನೀರು ಹರಿಯುವ ನದಿ, ಕಾಲುವೆ, ಝರಿಗಳನ್ನು ಒತ್ತುವರಿ ಮಾಡಿದ್ದಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸೈಂಟ್ ಮೇರಿಸ್‌ನಲ್ಲಿ ಸುರಕ್ಷತಾ ಕ್ರಮ

ಕಳೆದ ವರ್ಷದಂತೆ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯಾವುದೇ ದುರ್ಘಟನೆಗಳು ಸಂಭವಿಸದಂತೆ ಹಲವು ಸುರಕ್ಷತಾ ಕ್ರಮಗಳನ್ನು ತೆಗೆದು ಕೊಳ್ಳಲಾಗುತ್ತಿದೆ. ಪ್ರವಾಸಿಗರ ಪ್ರಮುಖ ಬೇಡಿಕೆಯಾದ ಸೆಲ್ಫಿ ಪಾಯಿಂಟ್ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಸಮುದ್ರದ ಪರಿಸ್ಥಿತಿ ನೋಡಿಕೊಂಡು ಹಾಗೂ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ಶೀಘ್ರದಲ್ಲೆ ಪ್ರವಾಸಿಗರಿಗೆ ದ್ವೀಪಕ್ಕೆ ತೆರಳಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

ಈ ಹಿಂದಿನ ಜಿಲ್ಲಾಧಿಕಾರಿಗಳು ಯೋಜಿಸಿ ಅರ್ಧಕ್ಕೆ ನಿಂತ ಯೋಜನೆಗಳ ಬಗ್ಗೆ ವಿಮರ್ಶಿಸಲಾಗುವುದು. ಜಿಲ್ಲೆಯ ಪ್ರವಾಸೋದ್ಯಮ ತಾಣಗಳನ್ನು ಹೆಚ್ಚು ಪ್ರಮೋಶನ್ ಮಾಡುವ ಬಗ್ಗೆ ಬ್ಲಾಗರ್ಸ್‌ಗಳಿಂದ ಸಲಹೆ ಪಡೆದುಕೊಳ್ಳಲಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುವುದು. ಇದಕ್ಕಾಗಿ Instagramನಲ್ಲಿಯೂ ಖಾತೆ ತೆರೆಯಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News