ಚನ್ನಪಟ್ಟಣ: ಸಿ.ಪಿ. ಯೋಗೇಶ್ವರ್ ಕಾರಿಗೆ ಮೊಟ್ಟೆ ಎಸೆತ; JDS ಕಾರ್ಯಕರ್ತರು ವಶಕ್ಕೆ

Update: 2022-10-01 07:37 GMT

ಚನ್ನಪಟ್ಟಣ: ತಾಲೂಕಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಆಗಮಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಿರುದ್ಧ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ( JDS ) ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅವರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. 

ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸದೆ ಶಂಕುಸ್ಥಾಪನೆ ನೆರವೇರಿಸಿದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಂಕ್ರೀಟ್‌ ರಸ್ತೆ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಶೇಷ ಅನುದಾನದಲ್ಲಿ 50 ಕೋಟಿ ರೂ.  ಬಿಡುಗಡೆ ಮಾಡಿದ್ದು, ಈ ಅನುದಾನ ತಂದವರು ನಾವು ಎಂದು ಜೆಡಿಎಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿರುವುದು ತಾಲೂಕಿನಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.

ಇಂದು ಇಲ್ಲಿನ ರಾಂಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿ.ಪಿ. ಯೋಗೇಶ್ವರ್  ವಿರುದ್ಧ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಅವರ ಕಾರಿಗೆ ಮೊಟ್ಟೆ ಎಸೆದಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News