ಉಡುಪಿ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ
ಉಡುಪಿ, ಅ.1: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿ ನಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕದ್ರವ್ಯ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಉಡುಪಿ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲಾ- ಕಾಲೇಜುಗಳ ವಿದ್ಯಾರ್ಥಿ ಗಳು ಮಾದಕದ್ರವ್ಯ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಇದರ ವಿಷವರ್ತುಲದೊಳಗೆ ಸಿಲುಕದಂತೆ ಎಚ್ಚರಿಕೆಯಿಂದಿರಬೇಕು ಎಂದು ಕಿವಿಮಾತು ಹೇಳಿದರು.
ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯ ಡಾ. ಸುನಿಲ್ ಇವರು ಮಾದಕದ್ರವ್ಯ ವ್ಯಸನ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಸಂದೀಪ್‌ಕುಮಾರ್ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಹಾಗೂ ಕಾಲೇಜಿನ ಉಪಪ್ರಾಂಶುಪಾಲೆ ರಂಜನಾ ಕೆ. ಉಪಸ್ಥಿತರಿದ್ದರು.