ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ; ಅ.7ಕ್ಕೆ ಉಭಯ ಸದನಗಳ ನಾಯಕರ ಸಭೆ

Update: 2022-10-01 16:24 GMT

ಬೆಂಗಳೂರು, ಅ. 1: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಸಮುದಾಯದ ಮೀಸಲಾತಿ ಹೆಚ್ಚಿಸುವ ಸಂಬಂಧ ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿಯ ಕುರಿತು ಚರ್ಚಿಸಲು ಅ.7ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲ ಉಭಯ ಸದನಗಳ ನಾಯಕರ ಸಭೆ ಕರೆಯಲಾಗಿದೆ.

ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಮಠದ ಪ್ರಸನ್ನನಂದ ಶ್ರೀಗಳು 230ಕ್ಕೂ ಹೆಚ್ಚು ದಿನಗಳಿಂದ ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿತ್ತು. ಆ ವೇಳೆ ಮೀಸಲಾತಿ ಹೆಚ್ಚಳ ಸಂಬಂಧ ಸರ್ವಪಕ್ಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಪ್ರಕಟಿಸಿದ್ದರು.

ಇದೀಗ ಅ.7ರ ಬೆಳಗ್ಗೆ 11:30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉಭಯ ಸದನಗಳ ನಾಯಕರ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News