ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ, ಅದೊಂದು ಆಕಸ್ಮಿಕ ಸಾವು : ಬಿ ರಿಪೋರ್ಟ್ ಸಲ್ಲಿಸಿದ ಸಿಬಿಐ

Update: 2022-10-04 05:43 GMT

ಕಾರವಾರ: ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 

ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಸಾವು ಎಂದು ಉಲ್ಲೇಖಿಸಲಾಗಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16 ಕ್ಕೆ ತೀರ್ಪು ಕಾಯ್ದಿರಿಸಲಾಗಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ.  ಬಳಿಕ ಡಿಸೆಂಬರ್ 8ರಂದು ಉತ್ತರ ಕನ್ನಡ  ಜಿಲ್ಲೆಯ ಹೊನ್ನಾವರದಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದ  ಬಿಜೆಪಿ ನಾಯಕರು ಹಾಗೂ ಸಂಘಪರಿವಾರ ಕಾರ್ಯಕರ್ತರು ಕೋಮು ದ್ವೇಷದಿಂದಲೇ ಹತ್ಯೆ ಮಾಡಿರುವುದಾಗಿ ವ್ಯಾಪಕವಾಗಿ ಆರೋಪಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.  ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದರಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಬಳಿಕ ಈ ಪ್ರಕರಣದಲ್ಲಿ 5 ಮಂದಿ ಆರೋಪಿಗಳನ್ನೂ ಬಂಧಿಸಲಾಗಿತ್ತು. ಇದೀಗ ಈ ಬಗ್ಗೆ ವಿವರವಾದ ತನಿಖೆ ನಡೆಸಿದ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಇದೀಗ ಈ ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಹತ್ಯೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. 

ಇದನ್ನೂ ಓದಿ:  ಪರೇಶ್ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಘ್ ಮಂಡಳಿ ಉಪಾಧ್ಯಕ್ಷ ಸ್ಥಾನ; ವಿರೋಧದ ಬಳಿಕ ಆದೇಶಕ್ಕೆ ತಡೆ

ಪ್ರತಿಭಟನೆ ವೇಳೆ ಐಜಿಪಿ ಅವರ ಕಾರಿಗೆ ಬೆಂಕಿ: 

ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್ ಹೆಗ್ಡೆ ಸೇರಿದಂತೆ ಹಲವರು ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ  ಅವರ ನೇತೃತ್ವದ ಅಂದಿನ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ನಡೆದ ಗಲಭೆ ವೇಳೆ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಲಾಯಿತು. ಪೊಲೀಸರು ಗಾಯಗೊಂಡಿದ್ದರು ಹಾಗೂ ಪೊಲೀಸರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿದ್ದವು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಸಂಘಪರಿವಾರದ ಕಾರ್ಯರ್ತರ ಹತ್ಯೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಪರೇಶ್ ಮೇಸ್ತಾ ಹೆಸರನ್ನು ಪಟ್ಟಿಯಲ್ಲಿ ಸೇರಿಸುತ್ತಿತ್ತು. ಈ ನಡುವೆ ಸಿಬಿಐ ಈಗ ಬಿ ರಿಪೋರ್ಟ್‌ ಸಲ್ಲಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News