ಅ.7ಕ್ಕೆ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ
ಬೆಂಗಳೂರು, ಅ. 5: ದಸರಾ ಉತ್ಸವ ಮುಕ್ತಾಯದ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಅ.7ರಿಂದ ಇಲ್ಲಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ.
ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನಾಳೆ(ಅ.6) ಬೆಂಗಳೂರು ನಗರಕ್ಕೆ ಆಗಮಿಸಲಿದ್ದು, ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ನಾಳೆ ಸಂಜೆ 5ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಸಂಜೆ 6ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಅವರು ಕುಮಾರಕೃಪಾ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಾಡಿದ್ದು, (ಅ.7) ಬೆಳಗ್ಗೆ ಅರುಣ್ ಸಿಂಗ್ ಅವರು ನಗರದ ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲಿದ್ದು, ಅಂದು ರಾತ್ರಿ 8 ಗಂಟೆಗೆ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ಕೊಡುವ ಅವರು ಬಳಿಕ ಬೆಂಗಳೂರು ವಿಮಾನನಿಲ್ದಾಣದಿಂದ ಹೊಸದಿಲ್ಲಿಗೆ ಪ್ರಯಾಣಿಸಲಿದ್ದಾರೆ.
ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯ ಪ್ರವಾಸ ಕೈಗೊಳ್ಳುವ ಸಂಬಂಧ ದಿನಾಂಕ ನಿಗದಿಪಡಿಸುವ ಸಾಧ್ಯತೆಗಳಿವೆ. ಅಲ್ಲದೆ, ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.