ಕರಾವಳಿಯ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ: ಕೇಂದ್ರ ಅನುಮೋದನೆ

Update: 2022-10-07 15:14 GMT

ಉಡುಪಿ, ಅ.7: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಸತತ ಎರಡನೇ ವರ್ಷವೂ ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (ಎಂಎಸ್‌ಪಿ) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ  ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರ ಪ್ರಯತ್ನದಿಂದ ಕರ್ನಾಟಕ ಸರಕಾರ ಈ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರದ ಆಹಾರ ಮತ್ತು ಸಾರ್ವಜನಿಕ ವಿತರಣಾ  ಇಲಾಖೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ರಾಜ್ಯ ಸರಕಾರದ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು. ಈ ಮನವಿ ಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಬೆಳೆಯುವ ರಾಜ್ಯದ ಜಿಲ್ಲೆಗಳಿಂದ ಎಂಎಸ್‌ಪಿ ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿದ್ದಾರೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಕುಚ್ಚಲಕ್ಕಿಯನ್ನೇ ಹೆಚ್ಚಾಗಿ ಸೇವಿಸುವ ಮೂರು ಜಿಲ್ಲೆಗಳ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ದೊರೆತಂತಾಗಿದೆ. ಇದಕ್ಕಾಗಿ ಶೋಭಾ ಕರಂದ್ಲಾಜೆ ಅವರು ಕರಾವಳಿಗರ ಪರವಾಗಿ ಕೇಂದ್ರ ಸಚಿವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News