ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಮಾಡುವ ಪ್ರಸ್ತಾಪ ಇಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಅ.8: ಗ್ರಾಮ ಪಂಚಾಯತ್ ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಯಾವುದೇ ಪ್ರಸ್ತಾಪವನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಇಂಥ ಪ್ರಸ್ತಾವನೆ ಬಂದಲ್ಲಿ ಅದನ್ನು ತಿರಸ್ಕರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ಕುರಿತು ಬಂದಿರುವ ಆದೇಶದ ಕುರಿತಂತೆ ಇಂದು ಟ್ವಿಟರ್ ಮೂಲಕ ಸ್ಪಷ್ಟೀಕರಣ ನೀಡಿದ ಸಚಿವರು ಈ ಬಗ್ಗೆ ರಾಜ್ಯದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಯಾವುದೇ ರೀತಿಯ ಗೊಂದಲ ಬೇಡ ಎಂದು ಹೇಳಿದ್ದಾರೆ.
ಅಧಿಕಾರ ಮೊಟಕು ಇಲ್ಲ: ರಾಜ್ಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಉಡುಪಿ ಜಿಲ್ಲಾ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕ ರಾಜೀವ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಕ್‌ಗೆ ಸಹಿ ಸೇರಿದಂತೆ ಇತರ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆಂಬ ಆತಂಕ ಗ್ರಾಮಪಂಚಾಯತ್‌ಗಳ ಅಧ್ಯಕ್ಷರು ಮತ್ತು ಸದಸ್ಯರಲ್ಲಿತ್ತು. ಈ ವಿಷಯವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು, ಜಿಲ್ಲೆಯ ಶಾಸಕರುಗಳು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮತ್ತು ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರ ಗಮನಕ್ಕೆ ತರಲಾಗಿತ್ತು.
ಇದರ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸದೇ ಇನ್ನೂ ಹೆಚ್ಚಿನ ಬಲವನ್ನು ಈ ಸರಕಾರ ನೀಡುವುದಾಗಿ ಸಚಿವರು ಸ್ಪಷ್ಟ ಪಡಿಸಿದ್ದಾರೆ ಎಂದು ರಾಜೀವ್ ಕುಲಾಲ್ ಹೇಳಿದ್ದಾರೆ.