ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿದಂತೆ ಐವರು ಮೃತ್ಯು
ಬಹ್ರೈಚ್: ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ ಹೈ ಟೆನ್ಷನ್ ವೈರ್‌ನ ಸ್ಪರ್ಶದಿಂದ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದು, ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನನ್ಪಾರಾ ಪ್ರದೇಶದ ಮಸುಪುರ್ ಗ್ರಾಮದಲ್ಲಿ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು, ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಗಾಡಿಯಲ್ಲಿ ಇರಿಸಲಾಗಿದ್ದ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ಗಾಯಾಳು ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಘಟನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.