ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಯಾವುದೇ ಪ್ರಸ್ತಾವಕ್ಕೆ ಮುಖ್ಯಮಂತ್ರಿ ತಿರಸ್ಕಾರ: ಸಚಿವ ಆರಗ ಜ್ಞಾನೇಂದ್ರ

Update: 2022-10-11 07:13 GMT

ಬೆಂಗಳೂರು, ಅ.11: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸಕ್ತ ಇರುವ ಯಾವುದೇ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು, ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು  ಭೇಟಿಯಾಗಿ, ಅಂತಹ ಯಾವುದೇ ಪ್ರಸ್ತಾವದ ವಿರುದ್ಧ ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳಿಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವವನ್ನು ತಿರಸ್ಕರಿಸಿರುವುದಾಗಿ ತಿಳಿಸಿದ್ದಾರೆ ಎಂದು ಗೃಹಸಚಿವರು ಹೇಳಿದ್ದಾರೆ.

ಗ್ರಾಮ ಪಂಚಾಯತ್  ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ  ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ, ಸಲ್ಲಿಸುತ್ತಿದೆ. ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧತೆಯಿಂದ ಕೂಡಿದೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯತ್ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವವನ್ನು ತಿರಸ್ಕರಿಸುವ ಮೂಲಕ ಮುಖ್ಯಮಂತ್ರಿಯವರು ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News