ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

Update: 2022-10-11 12:41 GMT

ಬೆಂಗಳೂರು, ಅ.11: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಅಕ್ರಮ ಎಸಗಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಇದೇ ತಿಂಗಳ ಅಂತ್ಯದಲ್ಲಿ ವಿಧಾನಸೌಧದ ಮುಂಭಾಗ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಸಮೃದ್ಧಿ ಕರ್ನಾಟಕ ಜನಪರ ಸಮಿತಿ ಸರಕಾರಕ್ಕೆ ಎಚ್ಚರಿಕೆ ನೀಡಿದೆ.

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ಸುಭಾಷ್ ಬಿದನೂರು, ‘ಕಲಬುರಗಿ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ 2017-18ನೇ ಸಾಲಿನ ಹೈನುಗಾರಿಕೆ ನೇರ ಸಾಲ ಯೋಜನೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗದೇ ಇರುವ 66 ಫಲಾನುಭವಿಗಳಿಗೆ ಹಣ ಮಂಜೂರು ಮಾಡಲಾಗಿದೆ’ ಎಂದು ಆರೋಪಿಸಿದರು.

ತಲಾ ಒಬ್ಬರಿಗೆ 37 ಸಾವಿರದಂತೆ 66 ಫಲಾನುಭವಿಗಳಿಗೆ ಒಟ್ಟು  24,42,000 ರೂ.ಗಳನ್ನು ಕಾನೂನುಬಾಹಿರವಾಗಿ ಹಣ ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣವನ್ನು ತನಿಖೆ ಮಾಡಿ ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಕ್ರಮ ಜರುಗಿಸಲ್ಲ ಎಂದು ಸುಭಾಷ್ ಬಿದನೂರು ದೂರಿದರು.

ಕಲಬುರಗಿ ಜಿಲ್ಲಾಡಳಿತಕ್ಕೆ ದೂರು ನೀಡಿದಾಗ, ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಜಿಲ್ಲೆಯ ಸಹಾಯಕ ಆಯುಕ್ತರಿಗೆ ವರ್ಗಾಹಿಸಿದ್ದಾರೆ. ಸಹಾಯಕ ಆಯುಕ್ತರು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಪಕರಿಗೆ ವರದಿ ನೀಡಲು ಆದೇಶ ನೀಡಿದರೂ, ವರದಿಯನ್ನು ಸಲ್ಲಿಸಲಿಲ್ಲ ಎಂದು ಅವರು ಮಾಹಿತಿ ನೀಡಿದರು.   

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಗುರುಸ್ವಾಮಿ, ಪಂಕಜ, ಶಶಿಕಾಂತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News