ಎಸ್‍ಎಸ್‍ಸಿ ಪರೀಕ್ಷೆಯಲ್ಲಿ ಕನ್ನಡ ಇಲ್ಲ: ಕೇಂದ್ರ ಸರಕಾರದ ವಿರುದ್ಧ ಕರವೇ ಆಕ್ರೋಶ

Update: 2022-10-13 17:19 GMT

ಬೆಂಗಳೂರು: ಕೇಂದ್ರ ಸಿಬ್ಬಂದಿ ಆಯೋಗ (ಎಸ್‍ಎಸ್‍ಸಿ) ನಡೆಸುವ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಮಾತ್ರ ಉತ್ತರ ಬರೆಯಲು ಅವಕಾಶ ನೀಡಿರುವ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗುರುವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು, ಕೇಂದ್ರ ಸರಕಾರದ ಈ ಕ್ರಮದಿಂದಾಗಿ ಕನ್ನಡ ಮಾಧ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುವ ಕರ್ನಾಟಕದ ಲಕ್ಷಾಂತರ ನಿರುದ್ಯೋಗಿ ಯುವಕರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದರಿಂದ ಹಿಂದಿ ಮಾಧ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುವವರು ಸುಲಭವಾಗಿ ಕೇಂದ್ರ ಸರಕಾರದ ಉದ್ಯೋಗಗಳನ್ನು ಪಡೆಯಲಿದ್ದಾರೆ. ಆದರೆ, ಪ್ರಾದೇಶಿಕ ಭಾಷಾ ಅಭ್ಯರ್ಥಿಗಳಿಗೆ ಭಾರೀ ವಂಚನೆ ಆಗುತ್ತಿದೆ ಎಂದು ಹೇಳಿದರು.

ಕನ್ನಡ ಸೇರಿದಂತೆ ಹಿಂದಿಯೇತರ ಭಾಷೆಗಳ ಅಭ್ಯರ್ಥಿಗಳು ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆಯಬೇಕಾದ ಅನಿವಾರ್ಯತೆ ಇರುವುದರಿಂದ, ಕೇಂದ್ರ ಸರಕಾರದ ಉದ್ಯೋಗಗಳನ್ನು ಪಡೆಯಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News