ಸರಕಾರದ ಯೋಜನೆ ಮನೆಗಳಿಗೆ ತಲುಪಿಸಲು ಕಾರ್ಯಕರ್ತರಿಗೆ ಬಿಜೆಪಿ ಕರೆ
ಮಂಗಳೂರು, ಅ.15: ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡಬೇಕು. 2023ರಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ಸರ್ವ ಪ್ರಯತ್ನ ಮಾಡಬೇಕು ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಹೇಳಿದರು.
ಅವರು ಶನಿವಾರ ಅಡ್ಯಾರ್ ಗಾರ್ಡನ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮತದಾರರ ಆಶೋತ್ತರಗಳಿಗೆ ತಕ್ಕಂತೆ ನಾವು ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆಯಿದೆ. ಅಧಿಕಾರದಲ್ಲಿ ದ್ದಾಗ ಚುನಾವಣೆ ಎದುರಿಸುವುದು ನಿಜವಾದ ಸವಾಲು. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಸರಕಾರದ ಯೋಜನೆಗಳನ್ನು ಮನೆಮನೆಗೆ ಮುಟ್ಟಿಸುವ ಕೆಲಸವನ್ನು ಮಾಡಬೇಕು ಎಂದು ರಾಜೇಶ್ ಹೇಳಿದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ಅಧ್ಯಕ್ಷತೆ ವಹಿಸಿದ್ದರು.
ಸಮಾರೋಪದ ವೇಳೆ ಮಾತನಾಡಿದ ಅವರು, ದೇಶಪ್ರೇಮ, ದೂರದೃಷ್ಟಿತ್ವದ ಚಿಂತನೆಯೊಂದಿಗೆ ಬಿಜೆಪಿಯ ನೀತಿ ಮತ್ತು ನಡವಳಿಕೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿ, ಶ್ಲಾಘನೆ ವ್ಯಕ್ತವಾಗಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆಗೆ ವಿಶೇಷ ಒತ್ತುನೀಡಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಸಮಾರೋಪದಲ್ಲಿ ಅವರು ಮಾತನಾಡಿ, ಜನರ ಆಶೋತ್ತರಗಳನ್ನು ಈಡೇರಿಸುವುದರೊಂದಿಗೆ ಕಲುಷಿತ ರಾಜಕಾರಣವನ್ನು ತಿಳಿಗೊಳಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಿಜೆಪಿ ಮಾಡಿದೆ ಎಂದರು.
ಕಾರ್ಯಕಾರಿಣಿಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರುಗಳು, ಜನಪ್ರತಿನಿಧಿಗಳು ಭೇಟಿ ನೀಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು. ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ ಮತ್ತು ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ನಿರೂಪಿಸಿದರು.