ಅರಸೀಕೆರೆ ಸರಣಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಮಂಡ್ಯ, ಅ.16: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಪಘಾತದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟೆಂಪೋ ಟ್ರಾವೆಲ್ಲರ್, ಹಾಲಿನ ವಾಹನ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಕಳೆದ ರಾತ್ರಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ. ಇವರೆಲ್ಲೂ ಟೆಂಪೋ ಟ್ರಾವೆಲ್ಲರ್ ಪ್ರಯಾಣಿಕರಾಗಿದ್ದಾರೆ. ಟೆಂಪೋ ಟ್ರಾವೆಲ್ಲರ್ ನಲ್ಲಿ ಒಟ್ಟು 14 ಮಂದಿಯಿದ್ದರು. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಹಾಸನ | ಸರಣಿ ಅಪಘಾತ: ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಮೃತ್ಯು