ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ; ಸಮಸ್ಯೆ ಪರಿಹಾರಕ್ಕೆ ಕ್ರಮ: ಸಿಎಂ ಬೊಮ್ಮಾಯಿ
ಬೆಂಗಳೂರು, ಅ.16: ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡುವಾಗ ಉದ್ಭವಿಸುತ್ತಿರುವ ಸಮಸ್ಯೆ ಕುರಿತಂತೆ ಅಧಿಕಾರಿಗಳೊಂದಿಗೆಚರ್ಚಿಸಿ ಕಾನೂನು ರೀತಿ ಕ್ರಮಕ್ಕೆ ಮುಂದಾಗಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ವಕೀಲ ಬಿ.ಡಿ.ಹಿರೇಮಠ್ ನೇತೃತ್ವದ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಜಾತಿ ಪ್ರಮಾಣ ಪತ್ರ ನೀಡುವಾಗ ಆಗುತ್ತಿಸುವ ಸಮಸ್ಯೆ ಕುರಿತಂತೆ ಅಡ್ವೋಕೇಟ್ ಜನರಲ್ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ, ಅ.18ರಂದು ಕೈಗೊಂಡಿರುವ ಪ್ರತಿಭಟನೆಯನ್ನು ವಾಪಸ್ ಪಡೆಯಬೇಕು ಎಂದು ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.
ಸಿಎಂ ಬೊಮ್ಮಾಯಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ್, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದ್ದರೂ ಬೇಡ ಜಂಗಮ ಸಮಾಜಕ್ಕೆ ಅಧಿಕಾರಿಗಳು ಸರಿಯಾಗಿ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರ ಈ ಕೂಡಲೇ ಸುತ್ತೋಲೆ ಹೊರಡಿಸಬೇಕು, ಸಮಸ್ಯೆಯನ್ನು ನಿವಾರಿಸಬೇಕು ಎಂದು ಕೋರಿಕೊಂಡಿದ್ದೇವೆ. ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಆಗುತ್ತಿರುವ ವಿಳಂಬದಿಂದಾಗಿ, ಸಮುದಾಯದ ವಿದ್ಯಾರ್ಥಿಗಳ ಮೇಲಾಗುತ್ತಿರುವ ಪರಿಣಾಮವನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದೆವು. ಪರಿಹರಿಸುವುದಾಗಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.