ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2022-10-17 14:29 GMT

ಬೆಂಗಳೂರು, ಅ.17: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.   

ಮಂಗಳವಾರ ಬೆಳಗ್ಗೆ 8.30ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರದಲ್ಲಿ ಮಂಗಳವಾರ ಬೆಳಗ್ಗೆ 8.30ರವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಸೋಮವಾರವೂ ಮಳೆ: ರಾಜ್ಯದಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸೋಮವಾರವೂ ಮಳೆ ಮುಂದುವರಿದ್ದು, ಹಲವು ಮನೆಗಳು ಕುಸಿದಿವೆ. ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News