ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
Update: 2022-10-17 20:38 IST
ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಭದ್ರಾವತಿಯ ಗ್ರಾಮವೊಂದರ ನಿವಾಸಿ ರಾಘವೇಂದ್ರ(27) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದು, ಈತ 3 ವರ್ಷ 4 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ನೊಂದ ಬಾಲಕಿಯ ತಾಯಿಯ ದೂರಿನನ್ವಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಭದ್ರಾವತಿ ಸಿಪಿಐ ಇ.ಒ.ಮಂಜುನಾಥ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಕೈಗೊಂಡ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಪೊಕ್ಸೊ ಅಡಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.