ಅ.21-22ರಂದು ಸಮುದಾಯ ವೈದ್ಯಕೀಯ ರಾಜ್ಯ ಮಟ್ಟದ ಸಮ್ಮೇಳನ
ಮಂಗಳೂರು, ಅ.18: ಯೆನೆಪೋಯ ವೈದ್ಯಕೀಯ ಕಾಲೇಜಿನಲ್ಲಿ ಎರಡು ದಿನಗಳ ಸಮುದಾಯ ವೈದ್ಯಕೀಯ ರಾಜ್ಯಮಟ್ಟದ ಸಮ್ಮೇಳನ ಇಂಡಿಯನ್ ಅಸೋಸಿಯೇಷನ್ ಪ್ರಿವೆಂಟಿವ್ ಅಂಡ್ ಸೋಶಿಯಲ್ ಮೆಡಿಸಿನ್, ಕರ್ನಾಟಕ ಚಾಪ್ಟರ್‌ನ 2 ನೇ ರಾಜ್ಯ ಸಮ್ಮೇಳನವನ್ನು ಅಕ್ಟೋಬರ್ 21 ಮತ್ತು 22 ರಂದು ಆಯೋಜಿಸಲಾಗಿದೆ.
ಯೆನೆಪೋಯ ವೈದ್ಯಕೀಯ ಕಾಲೇಜಿನಲ್ಲಿ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗವು ಈ ಕಾರ್ಯಕ್ರಮ ಆಯೋಜಿಸಿದ್ದು, ‘ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಮಾರ್ಗಸೂಚಿ’ ಎಂಬ ವಿಷಯದಲ್ಲಿ ಸಮ್ಮೇಳನ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕೇಂದ್ರದ ಡಾ.ನೂಪುರ್ ರಾಯ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಮುದಾಯ ವೈದ್ಯ/ಸಾರ್ವಜನಿಕ ಆರೋಗ್ಯ ಕ್ಷೇತ್ರದಿಂದ ಸುಮಾರು 250 ಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಯುಎನ್‌ಡಿಪಿ, ಯುನಿಸೆಫ್, ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್, ವಿಶ್ವ ಆರೋಗ್ಯ ಸಂಸ್ಥೆ, ಪಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಸೇರಿದಂತೆ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಸಂಸ್ಥೆಗಳಿಂದ 25 ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿ ದ್ದಾರೆ ಎಂದು ಪ್ರಕಟನೆ ತಿಳಿಸಿದೆ.