×
Ad

ಉಡುಪಿ ಜಿಲ್ಲೆಯಲ್ಲಿ ಜೆಇ ಲಸಿಕೆ ಅಭಿಯಾನ: ಜಿಲ್ಲಾಧಿಕಾರಿ ಕೂರ್ಮಾರಾವ್

Update: 2022-10-21 21:40 IST

ಉಡುಪಿ, ಅ.21: ಮಕ್ಕಳಲ್ಲಿ ಮೆದುಳು ಜ್ವರದ ಮಾದರಿಯಲ್ಲಿ ಕಂಡು ಬರುವ ಜೆ.ಇ. (ಜಪಾನಿಸ್ ಎನ್‌ಸೆಫಲಿಟಿಸ್) ವೈರಸ್‌ನಿಂದ ಉಂಟಾಗುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಜಿಲ್ಲೆಯ ಒಂದರಿಂದ 15 ವರ್ಷ ದೊಳಗಿನ 2,06,730 ಮಕ್ಕಳಿಗೆ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜೆಇ ಲಸಿಕೆ ಕಾರ್ಯಕ್ರಮದ ಕುರಿತು ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜೆಇ ವೈರಸ್ ಸೊಳ್ಳೆಯ ಮೂಲಕ ದೇಹಕ್ಕೆ ಹರಡಲಿದ್ದು, ಇದರಿಂದ 1-15 ವರ್ಷಗಳ ಒಳಗಿನ ಮಕ್ಕಳಿಗೆ ಜ್ವರ, ತಲೆನೋವು, ನಿಶ್ಯಕ್ತಿ, ವಾಂತಿ ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳಲಿದೆ.  ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳಿಗೆ ಡಿಸೆಂಬರ್ 5ರಿಂದ ಜೆಇ ಲಸಿಕೆ ನೀಡಲು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 1099 ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕುರಿತಂತೆ, ಮಕ್ಕಳ ಪೋಷಕರಿಗೆ ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಆರೋಗ್ಯ ಇಲಾಖೆಯ ವೈದ್ಯರ ಮೂಲಕ ಲಸಿಕೆಯ ಮಹತ್ವದ ಕುರಿತು ಸಾಕಷ್ಟು ಮುಂಚಿತವಾಗಿ ಅರಿವು ಮೂಡಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಎಲ್ಲಾ ಅಂಗನವಾಡಿಗಳಲ್ಲಿ ಮಕ್ಕಳ ತಾಯಂದಿರ ಸಭೆ ನಡೆಸಿ ಅರಿವು ಮೂಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲಾ ಲಸಿಕಾ ಕೇಂದ್ರಗಳಿಗೂ ನೋಡೆಲ್ ಅಧಿಕಾರಿಗಳನ್ನು ನೇಮಿಸುವಂತೆ ಸೂಚನೆಗಳನ್ನು ನೀಡಿದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂಗಳ ಜನಪ್ರತಿನಿಧಿಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆದು ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಯೋಜನೆ ರೂಪಿಸಿ ಅದರಂತೆ ಕಾರ್ಯನಿರ್ವಹಿಸಬೇಕು ಎಂದರು.

ಶಾಲೆಯಿಂದ ಹೊರಗುಳಿದ ಮತ್ತು ವಲಸೆ ಮಕ್ಕಳನ್ನು ಗುರುತಿಸಿ ಅವರಿಗೆ ಲಸಿಕೆ ನೀಡಲು ಯೋಜನೆ ರೂಪಿಸಿ. ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಲಸಿಕಾ ಕೇಂದ್ರವನ್ನು ತೆರೆಯುವಂತೆ ತಿಳಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಜೆಇ ಲಸಿಕೆಯನ್ನು ನೀಡಲಾಗುತ್ತಿದ್ದು, ಲಸಿಕೆಯು ಅತ್ಯಂತ ಸುರಕ್ಷತೆಯಿಂದ ಕೂಡಿದೆ. ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ತಪ್ಪದೆ ಕೊಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಕೀರ್ತಿನಾಥ್ ಬಲ್ಲಾಳ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News