ರಸ್ತೆ ಗುಂಡಿ ಮುಚ್ಚುವ ವಿಚಾರ: ಆದೇಶ ಪಾಲಿಸದ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಅಸಮಾಧಾನ
ಬೆಂಗಳೂರು, ಅ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕೆಂದು ಕೋರಿ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕಾಗಿ ಪಾಲಿಕೆ ಸಮರ್ಪಕ ತಂತ್ರಜ್ಞಾನ ಬಳಕೆ ಮಾಡಿಕೊಂಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಸ್ತೆ ಗುಂಡಿಗಳ ಮುಚ್ಚುವ ಪ್ರಕ್ರಿಯೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿತು. ಜತೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಗುಂಡಿ ಮುಚ್ಚಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ವಿಚಾರಣೆಯನ್ನು ನ.2ಕ್ಕೆ ಮುಂದೂಡಿತು.
ಬಿಬಿಎಂಪಿ ಪರ ವಾದಿಸಿದ ವಕೀಲರು, ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕಾಗಿ ಈವರೆಗೆ ಬಿಬಿಎಂಪಿ ಕೈಗೊಂಡ ವಿವರಗಳುಳ್ಳ ವರದಿಯನ್ನು ನ್ಯಾಯಪೀಠಕ್ಕೆ ನೀಡಿ, ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.