×
Ad

ಸುರತ್ಕಲ್ ಟೋಲ್‌ಗೇಟ್: ಧರಣಿ ಮುಂದೂಡುವಂತೆ ದ.ಕ.ಜಿಲ್ಲಾಧಿಕಾರಿ ಮನವಿ

Update: 2022-10-27 19:33 IST

ಮಂಗಳೂರು, ಅ.27: ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ದ.ಕ. ಜಿಲ್ಲಾಧಿಕಾರಿ ಡಾ. ಕುಮಾರ್ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಈ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಟೋಲ್‌ಗೇಟ್ ತೆರವಿಗಾಗಿ ರಚಿಸಲಾದ ಹೋರಾಟ ಸಮಿತಿಯವರು ತಾಳ್ಮೆ ವಹಿಸಬೇಕು, ಆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ, ಈ ಸಂದರ್ಭ ಸಮಿತಿಯ ಮುಖಂಡರು ಟೋಲ್‌ಗೇಟ್ ಇರುವ ರಾ.ಹೆ ಹೆದ್ದಾರಿ ವ್ಯಾಪ್ತಿಯಲ್ಲಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು, ತಪ್ಪಿದ್ದಲ್ಲೀ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಮಾತನಾಡಿದ ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ. ಗೆಜೆಟ್ ನೋಟಿಫಿಕೇಶನ್ ಪ್ರಕ್ರಿಯೆ ಬಾಕಿ ಉಳಿದಿದೆ, ನೋಟಿಫಿಕೇಶನ್ ಆಗುವ ದಿನಾಂಕವನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ, ಆದ ಕಾರಣ ಟೋಲ್‌ಗೇಟ್ ಹೋರಾಟ ಸಮಿತಿಯವರು ಯಾವುದೇ ರೀತಿಯ ಧರಣಿಗಳನ್ನು ಕೈಗೊಳ್ಳದಂತೆ ಮನವಿ ಮಾಡಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್ ಮತ್ತಿತರರು ಉಪಸ್ಥಿತರಿದ್ದರು.

Similar News