×
Ad

ಕೈದಿಗಳಿಗೆ ಮತದಾನದ ಹಕ್ಕು ಕೋರಿ ಪಿಐಎಲ್: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

Update: 2022-10-31 23:37 IST

ಹೊಸದಿಲ್ಲಿ, ಅ. 31: ಕೈದಿಗಳಿಗೆ ಮತದಾನದ ಹಕ್ಕನ್ನು ತಡೆಯುವ ಪ್ರಜಾ ಪ್ರತಿನಿಧಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸು ಜಾರಿ ಮಾಡಿದೆ. 

ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಹಾಗೂ ನ್ಯಾಯಮೂರ್ತಿಗಳಾದ ಎಸ್. ರವೀಂದ್ರ ಭಟ್, ಬೇಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.

2019ರಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಆದಿತ್ಯ ಪ್ರಸನ್ನ ಭಟ್ಟಾಚಾರ್ಯ ಎಂಬವರು ಜೈಲು ಶಿಕ್ಷೆಗೊಳಗಾದ ವ್ಯಕ್ತಿ ಚುನಾವಣೆಯಲ್ಲಿ ಮತ ಚಲಾಯಿಸುವುದನ್ನು ನಿಷೇಧಿಸುವ ಪ್ರಜಾ ಪ್ರತಿನಿಧಿ ಕಾಯ್ದೆ 62 (5) ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 
ಈ ಸಾರ್ವಜನಿಕ ಹಿತಾಸಕ್ತಿ ದಾವೆಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 29ರಂದು ನಡೆಸಲಿದೆ.

Similar News