ಡಿ.21ರಿಂದ ಆಳ್ವಾಸ್‌ನಲ್ಲಿ ಸ್ಕೌಟ್ಸ್-ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

Update: 2022-11-03 14:41 GMT

ಮಂಗಳೂರು, ನ.3: ದೇಶದಲ್ಲೇ ಪ್ರಪ್ರಥಮ ಬಾರಿಗೆ ಸ್ಕೌಟ್ಸ್-ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಡಿಸೆಂಬರ್ 21ರಿಂದ 27ರವರೆಗೆ ನಡೆಯಲಿದ್ದು, ಅದರ ಯಶಸ್ಸಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ನಿರ್ದೇಶನ ನೀಡಿದರು.

ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ಈ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಹಾಗೂ ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳ ಸಹಕಾರದಲ್ಲಿ ಈ ಸಾಂಸ್ಕೃತಿಕ ಜಾಂಬೂರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಿದಲ್ಲಿ ಅದರ ಕೀರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಜನರಿಗೆ ಸಂದಲಿದೆ, ಅದಕ್ಕಾಗಿ ಈ ಸುವರ್ಣ ಅವಕಾಶವನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ವಹಿಸುವ ಜವಬ್ದಾರಿ ಹಾಗೂ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ದೇಶ-ವಿದೇಶದ  ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗುಸುವುದರಿಂದ ಪ್ರವಾಸೋದ್ಯಮದ ಉತ್ತೇಜಕ್ಕೆ ಅನುಕೂಲಕರ ವಾಗಿ ಬಳಸಿಕೊಳ್ಳಬಹುದು ಎಂದು ಡಿಸಿ ಹೇಳಿದರು.

ಭಾರತ್ ಸ್ಕೌಟ್ಸ್-ಗೈಡ್ಸ್‌ನ ದ.ಕ. ಜಿಲ್ಲೆಯ ಜಿಲ್ಲಾ ಮುಖ್ಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವಾ ಮಾತನಾಡಿ ಸುಮಾರು 35000 ಶಿಬಿರಾರ್ಥಿಗಳು ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ. 10000 ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಧಿಕಾರಿಗಳು ಆಗಮಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಸಹಿತ ಕನಿಷ್ಟ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಈ ಸಂದರ್ಭ ಕೃಷಿ ಮೇಳ, ಫಲಪುಷ್ಟ ಪ್ರದರ್ಶನ, ವಿಜ್ಞಾನ ಮೇಳ, ಪುಸ್ತಕ ಮೇಳ,ಕಲಾಮೇಳ,ಆಹಾರಮೇಳ ಆಯೋಜಿಸಲಾಗುವುದು, ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಯೋಗ, ಪಥ ಸಂಚಲನ ಸೇರಿದಂತೆ ಸರಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.

ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ದ.ಕ.ಜಿಪಂ ಸಿಇಒ ಡಾ.ಕುಮಾರ್, ಮೇಯರ್ ಜಯಾನಂದ ಅಂಚನ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಉಪಸ್ಥಿತರಿದ್ದರು.

Similar News